ಸಹೋದರನನ್ನೇ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪಿ ಅಣ್ಣನ ಬಂಧನ

Spread the love

ಸಹೋದರನನ್ನೇ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪಿ ಅಣ್ಣನ ಬಂಧನ

ಮಂಗಳೂರು: ಮೊಬೈಲ್ನಲ್ಲಿ ಯುವತಿಯೊಂದಿಗೆ ಮಾತನಾಡಿದ್ದ ವಿಚಾರವಾಗಿ ಉಂಟಾದ ಮಾತಿನ ಚಕಮಕಿಯಲ್ಲಿ ಕೋಪಗೊಂಡ ಅಣ್ಣನೊಬ್ಬ ತನ್ನ ಸಹೋದರನನ್ನು ಕೊಡಲಿಯಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಸಮೀಪದ ಚೊಕ್ಕಬೆಟ್ಟು ಕೃಷ್ಣಮಠ ರಸ್ತೆಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಅಣ್ಣ ಸೋಮನಾಥ್ (21), ಪರಸಪ್ಪ ಅವರ ಪುತ್ರ, ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಗ್ಯಾಳ ಗ್ರಾಮದ ನಿವಾಸಿ, ಪ್ರಸ್ತುತ ಚೊಕ್ಕಬೆಟ್ಟಿನಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಕಳೆದ ಐದು ವರ್ಷಗಳಿಂದ ತಾಯಿ ಶಿವಲೀಲಾ ಹಾಗೂ ಇಬ್ಬರು ಪುತ್ರರು ಚೊಕ್ಕಬೆಟ್ಟಿನಲ್ಲಿರುವ ಶ್ರೀಮತಿ ರೇಖಾ ಅವರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಜುಲೈ 19ರಂದು ರಾತ್ರಿ ಸುಮಾರು 11 ಗಂಟೆ ವೇಳೆಗೆ, ಮಲ್ಲಿಕಾರ್ಜುನ ಮೊಬೈಲ್ನಲ್ಲಿ ಯುವತಿಯೊಬ್ಬರೊಂದಿಗೆ ಮಾತನಾಡುತ್ತಿದ್ದ ವೇಳೆ ಸೋಮನಾಥ್ ಅದನ್ನು ವಿರೋಧಿಸಿದ್ದಾನೆ. ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ತಮ್ಮ ಮಲ್ಲಿಕಾರ್ಜುನ ಅಣ್ಣನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಸೋಮನಾಥ್, ಮಲ್ಲಿಕಾರ್ಜುನ ಮಲಗಿದ ಬಳಿಕ ಮನೆಯಲ್ಲಿದ್ದ ಕೊಡಲಿಯಿಂದ ತಲೆ ಹಾಗೂ ಮುಖಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 89/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103(1) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ತನಿಖೆ ವೇಳೆ ಕೃಷ್ಣಾಪುರ ಮಠ ರಸ್ತೆ ಸಮೀಪದ ಪೊದೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ಸೋಮನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments