ದಕ್ಷಿಣ ಕನ್ನಡದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: ಎಂ.ಆರ್. ಸ್ವೀಟ್ಸ್ ಆಹಾರ ಸಾಮಗ್ರಿ ಸೀಜ್
ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಆಹಾರ ತಯಾರಿಕಾ ಘಟಕಗಳು ಹಾಗೂ ಇತರ ಆಹಾರ ಉದ್ಯಮಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳವಾರ ಅನಿರೀಕ್ಷಿತ ಪರಿಶೀಲನಾ ದಾಳಿ ನಡೆಸಿದರು.
ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ ವಿವಿಧ ಪ್ರದೇಶಗಳಲ್ಲಿನ ಆಹಾರ ಉದ್ಯಮಗಳ ಪರಿಶೀಲನೆ ನಡೆಸಲಾಯಿತು. ಆಹಾರ ತಯಾರಿಕೆ ಮತ್ತು ಸಂಗ್ರಹಣೆ ವೇಳೆ ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿರುವ ಎಂ.ಆರ್. ಸ್ವೀಟ್ಸ್ಗೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳದೆ ಸಿಹಿತಿಂಡಿ ಹಾಗೂ ಇತರ ಆಹಾರ ಪದಾರ್ಥಗಳನ್ನು ತಯಾರಿಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಆಹಾರ ಸಾಮಗ್ರಿಗಳನ್ನು ವಶಕ್ಕೆ ಪಡೆದು ಸೀಜ್ ಮಾಡಲಾಗಿದೆ. ಅಲ್ಲದೆ, ನೈರ್ಮಲ್ಯ ನಿಯಮಗಳನ್ನು ಉಲ್ಲಂಘಿಸಿ ಆಹಾರ ತಯಾರಿಸುತ್ತಿರುವ ಹಿನ್ನೆಲೆಯಲ್ಲಿ ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ, ತಲಪಾಡಿಯಲ್ಲಿರುವ ಉಡುಪಿ ಕೆಫೆ ರೆಸ್ಟೋರೆಂಟ್ನ ಅಡುಗೆಮನೆಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಹಾರ ತಯಾರಿಸುವಾಗ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಆಹಾರದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ.
