ಗ್ಯಾರಂಟಿ ಯೋಜನೆಗಳು ಸಮಾಜ ಪರಿವರ್ತನೆಯ ಶಕ್ತಿಯುತ ಕಾರ್ಯಕ್ರಮಗಳು :ಸಚಿವ ರಿಜ್ವಾನ್ ಅರ್ಷದ್
ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಯೋಜನೆ ಅಥವಾ ಕಾರ್ಯಕ್ರಮಗಳಲ್ಲ. ಅವು ಸಮಾಜವನ್ನು ಪರಿವರ್ತನೆ ಮಾಡುವ ಶಕ್ತಿಯುತ ಯೋಜನೆಗಳಾಗಿವೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಿ ಅವರುಗಳನ್ನು ಸ್ವಾವಲಂಭಿಯನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ ಮತ್ತು ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಬಡವರು, ದುರ್ಬಲರು, ಜನಸಾಮಾನ್ಯರ ಸೇವೆಯನ್ನು ಮಾಡುವುದರೊಂದಿಗೆ ಅವರ ಜೀವನವನ್ನು ಹಸನುಗೊಳಿಸಲು ಹಾಗೂ ಮಹಿಳೆಯರ ಸ್ವಾವಲಂಭಿ ಜೀವನ ನಡೆಸುವಂತಾಗಬೇಕು ಎಂಬ ಸದುದ್ದೇಶ ನಮ್ಮ ಸರ್ಕಾರದ್ದಾಗಿದೆ. ಈ ನಿಟ್ಟಿನಲ್ಲಿ ಸರಕಾರವು ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳು ಜನರ ಜೀವನ ಮಟ್ಟ ಸುಧಾರಣೆಗೆ ದಾರಿ ಮಾಡಿಕೊಟ್ಟಿದೆ ಎಂದರು.
ಚುನಾವಣೆಯ ಪೂರ್ವದಲ್ಲಿ ನೀಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಭರವಸೆಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದನ್ನು ಯಥಾವತ್ತಾ ತಡಮಾಡದೇ ಜಾರಿಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದೆ. ದೇಶದಲ್ಲಿ ಆಹಾರ ಪದಾರ್ಥಗಳು, ಗ್ಯಾಸ್, ಇಂಧನ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ ಸಹ ಪುರುಷರ ಆದಾಯ ಹೆಚ್ಚಾಗಿಲ್ಲ. ನಿರುದ್ಯೋಗಿ ಯುವಕರ ಸಂಖ್ಯೆ ಹೆಚ್ಚುತ್ತಿದ್ದು, ಕೋಟ್ಯಂತರ ಯುವಕರು ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಮನಗಂಡ ಸರ್ಕಾರ ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ವಿರೋಧ ಪಕ್ಷಗಳ ಟೀಕೆ, ಟಿಪ್ಪಣಿಗಳನ್ನು ಮೀರಿ ನಿಂತು ಸರ್ಕಾರ ಜನರಿಗೆ ನೆರವಾಗುವ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಮುಂದುವರೆಸಿಕೊAಡು ಹೋಗುತ್ತಿದೆ. ವಿದ್ಯುತ್ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದ ಜನರಿಗೆ ಗೃಹಜ್ಯೋತಿ ಯೋಜನೆ ಆಸರೆಯಾಗಿದೆ, ಮಹಿಳೆಯರು ಎಲ್ಲಾ ಸಂದರ್ಭದಲ್ಲಿ ಪುರುಷರ ಮುಂದೆ ಕೈಚಾಚದೇ ಸ್ವಾವಲಂಭಿ ಜೀವನ ನಡೆಸಲು ಗೃಹಲಕ್ಷಿö್ಮÃ ಯೋಜನೆ, ನಾಲ್ಕು ಗೋಡೆಯೊಳಗೆ ಬದುಕು ನಡೆಸಿಕೊಂಡು ಹೋಗುತ್ತಿದ್ದ ಮಹಿಳೆಯರು ಕೆಲಸ- ಕಾರ್ಯಗಳಿಗೆ ತೆರಳಲು, ಧಾರ್ಮಿಕ ಕ್ಷೇತ್ರ, ಪ್ರವಾಸಿ ತಾಣಗಳನ್ನು ಕಣ್ತುಂಬಿಕೊಳ್ಳಲು ಶಕ್ತಿ ಯೋಜನೆಗಳನ್ನು, ಬಡಜನರ ಹಸಿವಿನಿಂದ ನರಳಾಡಬಾರದು ಎಂಬ ನಿಟ್ಟಿನಲ್ಲಿ ಅನ್ನಭಾಗ್ಯ ಯೋಜನೆಯ ಮೂಲಕ ಪ್ರತೀ ಸದಸ್ಯನಿಗೆ 10 ಕೆ.ಜಿ ಅಕ್ಕಿಯನ್ನು ಹಾಗೂ ಕೆಲಸದ ನಿರೀಕ್ಷೆಯಲ್ಲಿರುವ ಯುವಜನರಿಗೆ ಉದ್ಯೋಗ ದೊರೆಯುವ ವರೆಗೆ ಆರ್ಥಿಕ ವೆಚ್ಚ ನಿವಾರಣೆಗೆ ಯುವನಿಧಿ ಯೋಜನೆಯನ್ನು ಜಾರಿಗೊಳಿಸಿದೆ ಎಂದರು.
ಸಮಾಜದಲ್ಲಿ ಸಾಮರಸ್ಯದ ಬದುಕು ನಿರ್ಮಿಸುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಪ್ರತಿಯೊಬ್ಬರೂ ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸುವಂತಾಗಬೇಕು. ಜನರ ಸೇವೆಗೆ ಸರ್ಕಾರ ಸದಾ ಬದ್ಧವಾಗಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಮಾಡುವುದಾಗಿ ಸಚಿವರು ತಿಳಿಸಿದರು.
ವಿಧಾನ ಪರಿಷತ್ತಿನ ಉಪ ಸಭಾಪತಿ ಡಾ. ಉಮಾಶ್ರೀ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕ್ರಾಂತಿಕಾರಕವಾಗಿದ್ದು, ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆಯ ಶಕ್ತಿಯನ್ನು ನೀಡಿವೆ. 2023 ರಲ್ಲಿ ರಾಜ್ಯದ ಜನರ ಬದುಕಿಗೆ ಆಸರೆಯಾಗುವ ಅನಿವಾರ್ಯತೆ ಇತ್ತು. ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆ, ಜನರಿಗೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಪಕ್ಷ, ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ಅರ್ಹ ಫಲಾನುಭವಿಗಳಿಗೂ ಈ ಯೋಜನೆಗಳ ಪ್ರಯೋಜನ ತಲುಪಿಸಲಾಗುತ್ತಿದೆ ಎಂದರು.
ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬರೀ ಮಹಿಳೆಯರಿಗಷ್ಟೇ ಸೀಮಿತವಾಗಿಲ್ಲ. ಮಹಿಳೆಯರ ಮೂಲಕ ಕುಟುಂಬದ ಪುರುಷರಿಗೂ ನೆರವಾಗುವ ಯೋಜನೆಗಳಾಗಿವೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ. ನಾಲ್ಕು ಗೋಡೆಗಳ ನಡುವೆ ಸೀಮಿತವಾಗಿದ್ದ ಮಹಿಳೆಯರು ಹೊರಜಗತ್ತಿಗೆ ತೆರೆದುಕೊಂಡು, ಸ್ವಾವಲಂಬಿಗಳಾಗಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವಂತಾಗಿದೆ. ಇದರಿಂದ ಮಹಿಳೆಯರ ಚಲನವಲನ ಹಾಗೂ ಸ್ವಾತಂತ್ರ್ಯಕ್ಕೆ ಹೊಸ ಅವಕಾಶ ದೊರೆತಿದೆ. ಪುರುಷರ ಕಿಸೆಗೆ ಬೀಳುತ್ತಿದ್ದ ಆರ್ಥಿಕ ಹೊರೆಯೂ ಕಡಿಮೆಯಾಗಿದೆ ಎಂದರು.
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳು ಇದೀಗ ಬೇರೆ ಬೇರೆ ರಾಜ್ಯಗಳಲ್ಲಿ ಇದೇ ಮಾದರಿಯ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅಭಿವೃದ್ಧಿ ಯೋಜನೆಗಳನ್ನು ಅನುಭವಿಸುವವರು ಪ್ರಜೆಗಳು. ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಮನುಷ್ಯನ ಬದುಕು ಕೂಡ ಅಭಿವೃದ್ಧಯತ್ತ ಸಾಗಬೇಕು. ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಬಹುದು ಎಂದರು.
ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪಿಸಲಾಗುತ್ತಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಹಣ ಪಾವತಿಯಲ್ಲಿ ವಿಳಂಬವಾಗಿರಬಹುದು. ಆದರೆ ಫಲಾನುಭವಿಗಳಿಗೆ ಪಾವತಿಸಬೇಕಾದ ಹಣವನ್ನು ಪಾವತಿಸಲಾಗಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಗಳು ಬಡ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ಬರಗಾಲದ ಸಂದರ್ಭದಲ್ಲಿ ಜನರು ವಲಸೆ ಹೋಗುವ ಪರಿಸ್ಥಿತಿ ಎದುರಾಗದಂತೆ ಇಂತಹ ಯೋಜನೆಗಳು ನೆರವಾಗುತ್ತವೆ. ಗ್ಯಾರಂಟಿ ಯೋಜನೆಗಳನ್ನು ಜನರು ಪಕ್ಷಾತೀತವಾಗಿ ಬಳಸಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.
ಜನರು ಕಟ್ಟುವ ತೆರಿಗೆಯಿಂದಲೇ ಸರ್ಕಾರದ ಖಜಾನೆ ತುಂಬುತ್ತದೆ. ಆ ಹಣವನ್ನು ಮತ್ತೆ ಜನರ ಕಲ್ಯಾಣಕ್ಕಾಗಿ ವಿನಿಯೋಗಿಸುವುದೇ ಸರ್ಕಾರದ ಕರ್ತವ್ಯ. ಬಡವರ ಹಾಗೂ ಮಹಿಳೆಯರ ಬದುಕು ಹಸನಾದಾಗ ಮಾತ್ರ ಸಮಾಜದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಜನರ ತೆರಿಗೆ ಹಣವನ್ನು ಜನರಿಗೇ ಮರಳಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದ ಅವರು, ಕಾಲಕಾಲಕ್ಕೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆಯೂ ಆಗಬೇಕು ಎಂದರು.
ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕ ಹಾಗೂ ವಾಗ್ಮಿ ಡಾ. ವಾಸು ದಿಕ್ಸೂಚಿ ಭಾಷಣ ಮಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಅವರು, ನೂತನವಾಗಿ ಆಯ್ಕೆಯಾದ ಗ್ರಾಮ ಸಮಿತಿಗಳ ಸದಸ್ಯರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್. ರೇವಣ್ಣ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಡಾ. ದೀಪಕ್ ತಿಮ್ಮಯ್ಯ, ಕರಾವಳಿ ಅಭಿವೃದ್ಧಿಯ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮುಖಂಡರಾದ ವಿನಯ್ ಕುಮಾರ್ ಸೊರಕೆ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಗೋಪಾಲ ಪೂಜಾರಿ, ಜಯಪ್ರಕಾಶ್ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.