ಕರಾವಳಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಟೆಂಪಲ್ ರನ್: ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಸಾಥ್
ಉಡುಪಿ: ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಹಿರಿಯ ನಾಯಕ ಎಸ್.ಎಲ್. ಭೋಜೇಗೌಡ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಸೇರಿದಂತೆ ಪಕ್ಷದ ಮುಖಂಡರೊಂದಿಗೆ ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಹಾಗೂ ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಅಲ್ಲದೆ, ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಪವಾಡಗಳ ಐತಿಹ್ಯ ಹೊಂದಿರುವ ದಂಡತೀರ್ಥ ಮಠಕ್ಕೂ ಭೇಟಿ ನೀಡಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಜೇಕ್ ಮಾಧವ ಗೌಡ, ಮಾಜಿ ಶಾಸಕ ಮೊಯ್ದೀನ್ ಬಾವ, ಎಂ.ಬಿ. ಸದಾಶಿವ, ಇಕ್ಬಾಲ್ ಮುಲ್ಕಿ, ರತ್ನಾಕರ್ ಸುವರ್ಣ ಹಾಗೂ ಯೋಗೀಶ್ ಶೆಟ್ಟಿ ಜೆಪ್ಪು ಉಪಸ್ಥಿತರಿದ್ದರು.












