ದ್ವೇಷ ಭಾಷಣ ಪ್ರಕರಣ: ಶಾಸಕ ಯಶ್ಪಾಲ್ ಸುವರ್ಣರಿಗೆ ನೋಟಿಸ್ ನೀಡಿದ ನಗರ ಠಾಣೆ ಪೊಲೀಸರು
ಉಡುಪಿ: ದ್ವೇಷ ಭಾಷಣ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಶಾಸಕರ ನಿವಾಸಕ್ಕೆ ತೆರಳಿ ನೋಟಿಸ್ ನೀಡಿದ್ದು ಶಾಸಕರು ಅದನ್ನು ಬುಧವಾರ ಸ್ವೀಕರಿಸಿದರು.
ಮೊದಲು ತಾಲೂಕು ಕಚೇರಿ ಬಳಿಯ ಶಾಸಕರ ಕಚೇರಿಗೆ ಪೋಲಿಸರು ಬರುವುದಾಗಿ ಮಾಹಿತಿ ಇದ್ದು ಕಚೇರಿಗೆ ಆಗಮಿಸಿದ ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಇತ್ತೀಚೆಗೆ ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು ಹಾಗೂ ಬಾಬರಿ ಮಸೀದಿ ಉಲ್ಲೇಖಿಸಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ದೂರು ನೀಡಿತ್ತು. ಅದರಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ದ್ವೇಷ ಭಾಷಣ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದ ಬಳಿಕ ಪೊಲೀಸರು ನೋಟಿಸ್ ನೀಡಲು ಶಾಸಕರ ಕಚೇರಿಗೆ ಆಗಮಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಹರಡಿದ್ದರಿಂದ, ನೂರಾರು ಬಿಜೆಪಿ ಕಾರ್ಯಕರ್ತರು ಕಚೇರಿ ಬಳಿ ಜಮಾಯಿಸಿ ಶಾಸಕರಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮುಖಂಡರು ಹಾಗೂ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದು ಕಾರ್ಯಕರ್ತರಿಗೆ ಬೆಂಬಲ ನೀಡಿದರು.
ಆದರೆ, ಕಾರ್ಯಕರ್ತರ ಹೆಚ್ಚಿನ ಸಂಖ್ಯೆಯ ಜಮಾವಣೆಯ ನಡುವೆಯೂ ಪೊಲೀಸರು ನೋಟಿಸ್ ನೀಡಲು ಕಚೇರಿಗೆ ಆಗಮಿಸದೆ ಶಾಸಕರ ನಿವಾಸದ ಕಚೇರಿಗೆ ತೆರಳಿ ನೋಟಿಸ್ ನೀಡಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದು, ಯಾವುದೇ ನೋಟಿಸ್ ನೀಡಿದರೂ ಅದನ್ನು ಸ್ವೀಕರಿಸಲು ತಾವು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
“ನಾನು ಯಾವುದೇ ದೇಶವಿರೋಧಿ ಚಟುವಟಿಕೆ ನಡೆಸಿಲ್ಲ, ಡಕಾಯಿತಿ ಅಥವಾ ದೊಂಬಿಯಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ ನಾನು ಮಾತನಾಡಿದ್ದೇನೆ. ನನ್ನ ಹೇಳಿಕೆಯ ಬಗ್ಗೆ ನನಗೆ ಹೆಮ್ಮೆ ಇದೆ. ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಗೌರವ ನೀಡುತ್ತಿರುವ ಸಂದರ್ಭದಲ್ಲಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ” ಎಂದು ಹೇಳಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ಮೀರಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಇತರೆ ವಿಷಯಗಳನ್ನೂ ಪ್ರಸ್ತಾಪಿಸಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕ ಮಂದಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ಆರೋಪಿಸಿದ ಅವರು, ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ಬಗ್ಗೆ ಕಾಂಗ್ರೆಸ್ ಮಾಹಿತಿ ಪಡೆದುಕೊಳ್ಳಲಿ ಎಂದು ಸವಾಲು ಹಾಕಿದರು.
ರಾಹುಲ್ ಗಾಂಧಿ ಅವರು ಸದಾ ವಿದೇಶ ಪ್ರವಾಸದಲ್ಲಿರುತ್ತಾರೆ. ದೆಹಲಿ ಪ್ರತಿಭಟನೆ ವೇಳೆ ಕಾಂಗ್ರೆಸ್ ಹೀನಾಯವಾಗಿ ವರ್ತಿಸಿದ್ದು, ಇಂದು ಸಂಸತ್ತಿನಲ್ಲಿ “ಈಡಿಯಟ್” ಎಂಬ ಪದ ಬಳಕೆ ಮಾಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಗೌರವ ತರುವ ವಿಷಯವಲ್ಲ. ಮೊದಲು ಕಾಂಗ್ರೆಸ್ ತನ್ನದೇ ಪಕ್ಷದ ನಾಯಕರನ್ನು ತಿದ್ದಿಕೊಳ್ಳಬೇಕು ಎಂದು ಟೀಕಿಸಿದರು.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ, ಉಡುಪಿ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಮರ್ಪಕ ಅನುದಾನ ದೊರೆಯುತ್ತಿಲ್ಲ. ಶಾಲಾ ಕಟ್ಟಡಗಳು ಸೋರಿಕೆಯಾಗುತ್ತಿದ್ದು, ಅಂಗನವಾಡಿಗಳಲ್ಲಿ ಮೊಟ್ಟೆ ವಿತರಣೆ ಕೂಡ ಸ್ಥಗಿತಗೊಂಡಿದೆ. ಕರಾವಳಿ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ತಮ್ಮ ವಿರುದ್ಧ ಮಾಜಿ ಸಚಿವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಸಹಜ. ಆದರೆ, ಇದರಿಂದ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಹೇಳಿದರು.
“ಸಿದ್ಧಾಂತದ ವಿಚಾರದಲ್ಲಿ ನಾನು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಮಣಿಪಾಲದಲ್ಲಿ ನಡೆದ ಪ್ರತಿಭಟನೆ ಕುರಿತು ಬಿಜೆಪಿ ಯುವ ಮೋರ್ಚಾ ಈಗಾಗಲೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸರ್ಕಾರಗಳು ಶಾಶ್ವತವಲ್ಲ. ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನ್ಯಾಯಯುತವಾಗಿ ಕೆಲಸ ಮಾಡಬೇಕು. ಕಾಂಗ್ರೆಸ್ ನಾಯಕರಿಗೆ ಹೆದರಿ ಕರ್ತವ್ಯ ನಿರ್ವಹಿಸಬಾರದು” ಎಂದು ಹೇಳಿದರು.
ಪ್ರತಿಭಟನೆಗಳ ವೇಳೆ ಪೊಲೀಸರನ್ನೂ ಅವಹೇಳನ ಮಾಡಲಾಗಿದ್ದು, ರಾಜಕೀಯ ಒತ್ತಡಗಳಿಂದ ಪೊಲೀಸರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಯಶ್ಪಾಲ್ ಸುವರ್ಣ ಆರೋಪಿಸಿದರು.
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ ಬಿಜೆಪಿ ಭದ್ರಕೋಟೆಗಳಲ್ಲಿರುವ ಶಾಸಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಪ್ರಕರಣಗಳನ್ನು ದಾಖಲಿಸುವ ಮೂಲಕ ಕಾರ್ಯಕರ್ತರ ಧೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಬಿಜೆಪಿ ಶಾಸಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದೀಗ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧವೂ ದೂರು ದಾಖಲಿಸಿರುವುದು ಅದೇ ಧೋರಣೆಯ ಮುಂದುವರಿಕೆಯಾಗಿದೆ ಎಂದರು.
“ಪ್ರಕರಣ ದಾಖಲಿಸುವ ಮೂಲಕ ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸಲಾಗುತ್ತಿದೆ. ಇತ್ತೀಚೆಗಷ್ಟೇ ಬಿಜೆಪಿ ನಾಯಕ ಸಿ.ಟಿ. ರವಿ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಆದರೆ, ಇಂತಹ ಪ್ರಕರಣಗಳಿಗೆ ನಾವು ಹೆದರುವುದಿಲ್ಲ” ಎಂದು ಅವರು ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹಲವು ಪ್ರಕರಣಗಳಿದ್ದು, ಸರಿಯಾಗಿ ಪರಿಶೀಲಿಸಿದರೆ ಅವರ ವಿರುದ್ಧವೇ ರೌಡಿಶೀಟರ್ ತೆರೆಯಬೇಕಾದ ಪರಿಸ್ಥಿತಿ ಇದೆ ಎಂದು ಭರತ್ ಶೆಟ್ಟಿ ಆರೋಪಿಸಿದರು. ಅಲ್ಲದೆ, ಅವರು ಉಮರ್ ಖಾಲಿದ್ ಬೆಂಬಲಿಗರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ದೂರಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು “ಪಾಕಿಸ್ತಾನ ಶತ್ರು ರಾಷ್ಟ್ರವಲ್ಲ” ಎಂಬ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ಅವರು, ಇದು ಕಾಂಗ್ರೆಸ್ನ ಮನೋಭಾವವನ್ನು ತೋರಿಸುತ್ತದೆ ಎಂದರು.
ಪ್ರಿಯಾಂಕ್ ಖರ್ಗೆ ಅವರು ಪ್ರತಿದಿನ ಬೆಳಿಗ್ಗೆ ಎದ್ದ ಕೂಡಲೇ ಆರ್ಎಸ್ಎಸ್ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದ ಅವರು, ರಾಜ್ಯದ ಪೊಲೀಸ್ ವ್ಯವಸ್ಥೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.
“ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಆದರೆ, ಸರ್ಕಾರವು ಪೊಲೀಸರ ಮೇಲೆ ಒತ್ತಡ ಹೇರಿ ಅವರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ರೀತಿಯ ಪದ ಬಳಸಲು ನನಗೂ ಬೇಸರವಾಗುತ್ತದೆ. ರಾಜಕೀಯ ಒತ್ತಡದ ಮೂಲಕ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಕಾಂಗ್ರೆಸ್ ಶಾಸಕರು ಏನೇ ಮಾತನಾಡಿದರೂ ಅವರ ವಿರುದ್ಧ ಪ್ರಕರಣ ದಾಖಲಾಗುವುದಿಲ್ಲ” ಎಂದು ಆರೋಪಿಸಿದರು.
ಈ ಎಲ್ಲ ಬೆಳವಣಿಗೆಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ತಿಳಿಸಿದ ಅವರು, “ಈ ವಿಚಾರವನ್ನು ಸದನದ ಒಳಗೂ ಹೊರಗೂ ಬಿಜೆಪಿ ಹೋರಾಟದ ಮೂಲಕ ಪ್ರಸ್ತಾಪಿಸಲಿದೆ” ಎಂದು ಹೇಳಿದರು.
