ದ್ವೇಷ ಭಾಷಣ ಪ್ರಕರಣ: ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ

Spread the love

ದ್ವೇಷ ಭಾಷಣ ಪ್ರಕರಣ: ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಮಂಗಳವಾರ ಉಡುಪಿ ನಗರದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಬುಧವಾರ ಉಡುಪಿ ನಗರ ಪೊಲೀಸರು ಶಾಸಕರ ನಿವಾಸಕ್ಕೆ ತೆರಳಿ ನೋಟಿಸು ನೀಡಿದ್ದರು. ಅದರಂತೆ ಶಾಸಕ ಯಶ್ ಪಾಲ್ ಸುವರ್ಣ ನಗರ ಠಾಣೆಗೆ ಹಾಜರಾಗಿದ್ದು ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದು ಅದಕ್ಕೆ ಅವರು ಉತ್ತರಿಸಿದ್ದಾರೆ ಎನ್ನಲಾಗಿದೆ. ರಾತ್ರಿ 8.25ಕ್ಕೆ ಠಾಣೆಗೆ ಆಗಮಿಸಿದ ಅವರು ಸುಮಾರು ಒಂದು ಗಂಟೆಗಳ ಕಾಲ ವಿಚಾರಣೆಗೆ ಒಳಗಾಗಿದ್ದು ರಾತ್ರಿ 9:30ರ ಸುಮಾರಿಗೆ ಠಾಣೆಯಿಂದ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ಗೆ ಸ್ಪಂದಿಸಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ತನಿಖಾಧಿಕಾರಿಯ ಮುಂದೆ ಹಾಜರಾಗಿ, ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಹರಿರಾಮ್ ಶಂಕರ್, “ಪೊಲೀಸರ ನೋಟಿಸ್ಗೆ ಸ್ಪಂದಿಸಿದ ಶಾಸಕ ಯಶ್ಪಾಲ್ ಸುವರ್ಣ ಅವರು ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದಾರೆ. ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ. ಅವರಿಂದ ಪಡೆದ ಉತ್ತರಗಳ ಆಧಾರದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.


Spread the love
Subscribe
Notify of

0 Comments