ಭಾರೀ ಮಳೆ ಮುನ್ಸೂಚನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜು.23) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ ಮುನ್ಸೂಚನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜು.23) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ.

ಅದರಂತೆ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಜುಲೈ 23, 2026ರಂದು ರಜೆ ಘೋಷಿಸಲಾಗಿದೆ. ಈ ದಿನ ಯಾವುದೇ ತರಗತಿಗಳನ್ನು ನಡೆಸದಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ–2005ರ ಕಲಂ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪಾಲಕರು ಮಕ್ಕಳು ನೀರಿನ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರತೀರಗಳಿಗೆ ತೆರಳದಂತೆ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ನಿರ್ದೇಶಿಸಲಾಗಿದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರ ಮತ್ತು ಸಮುದ್ರತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಆದೇಶಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತ ಪ್ರಕಟಿಸಿರುವ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.


Spread the love
Subscribe
Notify of

0 Comments