ಭಾರೀ ಮಳೆ ಮುನ್ಸೂಚನೆ: ದಕ ಜಿಲ್ಲೆಯಲ್ಲಿ ನಾಳೆ (ಆ.1) ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 1, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಎಲ್ಲಾ ವಸತಿ ಶಾಲೆಗಳು, 12ನೇ ತರಗತಿ ಸೇರಿದಂತೆ ಎಲ್ಲಾ ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳನ್ನು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದೇಶಿಸಲಾಗಿದೆ.
ಇದಲ್ಲದೆ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿಯೊಂದು ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತ ನೀಡಿರುವ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
