ಭೀಕರ ಅಪಘಾತ ; ಯುವಕನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ

Spread the love

ಭೀಕರ ಅಪಘಾತ ; ಯುವಕನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ

ಮಂಗಳೂರು: ಉಳ್ಳಾಲ, ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್-ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ ಗೋಪಾಲ ಮತ್ತು ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಮೆದುಳು ನಿಷ್ಕ್ರಿಯಗೊಂಡ ಯುವಕ.

ವರ್ಷಿತ್ ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಕುತ್ತಾರುವಿನಿಂದ ತನ್ನ ಮನೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಬೈಕ್‌ನಿಂದ ರಸ್ತೆಗೆಸೆಯಲ್ಪಟ್ಟ ವರ್ಷಿತ್ ಅವರ ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ವೈದ್ಯರ ಸಲಹೆಯ ಮೇರೆಗೆ ವರ್ಷಿತ್ ಅವರ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ವಿವಿಧ ಆಸ್ಪತ್ರೆಗಳಿಂದ ಮೂತ್ರಪಿಂಡ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಗಳಿಗೆ ಬೇಡಿಕೆ ಬಂದಿದ್ದು, ಇಂದು ‘ಝೀರೋ ಟ್ರಾಫಿಕ್’ ವ್ಯವಸ್ಥೆಯ ಮೂಲಕ ಅಂಗಾಂಗಗಳನ್ನು ಸಂಬಂಧಪಟ್ಟ ಆಸ್ಪತ್ರೆಗಳಿಗೆ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಪಘಾತದಲ್ಲಿ ಸ್ಕೂಟ‌ರ್ ಸವಾರ ಧೀರಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರ್ಷಿತ್ ಅವಿವಾಹಿತರಾಗಿದ್ದು, ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಂದೆ, ತಾಯಿ ಹಾಗೂ ಏಕೈಕ ಸಹೋದರನನ್ನು ಅಗಲಿದ್ದಾರೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love
Subscribe
Notify of

0 Comments