ಕಲಬುರಗಿಯಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಆರೋಪ: ಪತಿ ವಶಕ್ಕೆ
ಕಲಬುರಗಿ: ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ. ಅವರ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪದಲ್ಲಿ ಪೊಲೀಸರ ವಶದಲ್ಲಿದ್ದು, ಸೂರ್ಯಕಾಂತ್ ವಕೀಲ ವೃತ್ತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಮಕ್ಕಳಾಗದ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಯೊಂದಿಗೆ ಸೂರ್ಯಕಾಂತ್ ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ಘಟನೆಯನ್ನು ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
