ಕೊಲ್ಲೂರು  ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಯೊಳಗೆ ಆರೋಪಿ ಬಂಧನ

Spread the love

ಕೊಲ್ಲೂರು  ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಯೊಳಗೆ ಆರೋಪಿ ಬಂಧನ

ಬೈಂದೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳಾ ಯಾತ್ರಾರ್ಥಿಯ ಮೈಮೇಲಿದ್ದ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮೇ 17, 2026ರಂದು ಉಡುಪಿ ಜಿಲ್ಲೆ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ದಳಿ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಮೃತಪಟ್ಟಿದ್ದರು. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳು ಕಳುವಾಗಿರುವ ಕುರಿತು ಶ್ರೀಕುಮಾರ ಅವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕರಾದ ಶಿವಕುಮಾರ ಅವರ ಮಾರ್ಗದರ್ಶನದಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕರಾದ ವಿನಯ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ತನಿಖೆ ಕೈಗೊಂಡಿತು.

ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ್ (40) ಎಂಬ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಪತ್ತೆಹಚ್ಚಿ ಬಂಧಿಸಲಾಗಿದೆ.

ಬಂಧಿತ ಆರೋಪಿಯಿಂದ 3.910 ಗ್ರಾಂ ತೂಕದ ಚಿನ್ನದ ಉಂಗುರ (ಅಂದಾಜು ಮೌಲ್ಯ ₹57,000), 3.450 ಗ್ರಾಂ ತೂಕದ ಚಿನ್ನದ ಬಳೆ (ಅಂದಾಜು ಮೌಲ್ಯ ₹50,000) ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ (ಅಂದಾಜು ಮೌಲ್ಯ ₹1 ಲಕ್ಷ) ಸೇರಿದಂತೆ ಒಟ್ಟು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Subscribe
Notify of

0 Comments
Inline Feedbacks
View all comments