Home Mangalorean News Kannada News ಕುಂದಾಪುರ| ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ಪ್ರಕರಣ: ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್...

ಕುಂದಾಪುರ| ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ಪ್ರಕರಣ: ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

Spread the love

ಕುಂದಾಪುರ| ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ಪ್ರಕರಣ: ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

ಉಡುಪಿ: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸುವ ಮೂಲಕ ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿದ ಆಯುಕ್ತ ಗುರುದತ್ತ ಹೆಗಡೆ, ಮಹೇಂದ್ರ ಕುಮಾರ್ ವಿರುದ್ಧದ ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿತನ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಗೆ ಸರಕಾರಿ ವೈದ್ಯನಿಂದ ಹಲ್ಲೆ ಆರೋಪ: ಪ್ರಕರಣ ದಾಖಲು
ಉಡುಪಿ: ಕನ್ನಡ ಪ್ರಭ ಕುಂದಾಪುರ ಹಾಗೂ ಬೈಂದೂರು ತಾಲೂಕು ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರಕಾರಿ ವೈದ್ಯಾಧಿಕಾರಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ವೈದ್ಯರು ಬಡರೋಗಿಗಳಿಂದ ಚಿಕಿತ್ಸೆಯ ವೇಳೆ ಹಣ ಪಡೆಯುತ್ತಿರುವ ಬಗ್ಗೆ ಶ್ರೀಕಾಂತ್ ಹೆಮ್ಮಾಡಿ ತಮ್ಮ ಪತ್ರಿಕೆಯಲ್ಲಿ ವರದಿ ಮಾಡಿದ್ದರು. ಇದೇ ವಿಚಾರದಲ್ಲಿ ದ್ವೇಷಗೊಂಡ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.

ಘಟನೆಯ ಹಿನ್ನಲೆ
ಆ.21ರಂದು ಬೆಳಗ್ಗೆ ಕುಂದಾಪುರ ಹೊಟೇಲ್ನಲ್ಲಿ ಶ್ರೀಕಾಂತ್ ಹೆಮ್ಮಾಡಿ ತನ್ನ ಪತ್ನಿ ಹಾಗೂ ಸಹಪಾಠಿ ಜೊತೆ ಉಪಹಾರ ಸೇವಿಸುತ್ತಿದ್ದು, ಈ ವೇಳೆ ಅಲ್ಲಿಗೆ ಬಂದ ಡಾ.ಮಹೇಂದ್ರ ಕುಮಾರ್ ಶೆಟ್ಟಿ, ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದರು.

ವ್ಯಾಪಕ ಖಂಡನೆ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬ್ರಹ್ಮಾವರ, ಬೈಂದೂರು, ಕಾಪು, ಕುಂದಾಪುರ, ಹೆಬ್ರಿ, ಕಾರ್ಕಳ ತಾಲೂಕು ಘಟಕಗಳು ತೀವ್ರವಾಗಿ ಖಂಡಿಸಿವೆ.

ಅದೇ ರೀತಿ ಈ ಹಲ್ಲೆಯನ್ನು ಸಹಬಾಳ್ವೆ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಪ್ರೊ.ಫಣಿರಾಜ್, ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಹಾಗೂ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಸಂತೋಷ ಬಜಾಲ್ ತೀವ್ರವಾಗಿ ಖಂಡಿಸಿ, ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಆಗ್ರಹಿಸಿದ್ದಾರೆ.

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಗೆ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಎಸ್ಪಿ, ಡಿಎಚ್‌ಓಗೆ ಮನವಿ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವಂತೆ ಆಗ್ರಹಿಸಿ ಸಂಘದ ನಿಯೋಗ ಶುಕ್ರವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆಗಳ ಸಂದರ್ಭದಲ್ಲಿ ಬಡ ಹಾಗೂ ಸಾಮಾನ್ಯ ರೋಗಿಗಳಿಂದ ಹಣ ಪಡೆಯ ಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ಹೆಮ್ಮಾಡಿ ತಮ್ಮ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದರು. ಈ ವರದಿಯಿಂದ ಅಸಮಾಧಾನ ಗೊಂಡಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಆ.21ರಂದು ಕುಂದಾಪುರದ ಹೊಟೇಲೊಂದರಲ್ಲಿ ಉಪಹಾರ ಸೇವಿಸುತ್ತಿದ್ದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಹಾಗೂ ಭ್ರಷ್ಟಾಚಾರದ ಕುರಿತು ವರದಿ ಮಾಡುವುದು ಪತ್ರಕರ್ತನ ಕರ್ತವ್ಯ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳನ್ನು ಬೆಳಕಿಗೆ ತರುವ ಮೂಲಕ ಶ್ರೀಕಾಂತ್ ಹೆಮ್ಮಾಡಿ ತಮ್ಮ ಪತ್ರಿಕಾ ಧರ್ಮ ಹಾಗೂ ವೃತ್ತಿಪರ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಇದಕ್ಕಾಗಿ ಸರಕಾರಿ ವೈದ್ಯಾಧಿಕಾರಿಯೊಬ್ಬರು ಪತ್ರಕರ್ತನ ಮೇಲೆ ಹಲ್ಲೆ ನಡೆಸಿರುವುದು ಅತ್ಯಂತ ಗಂಭೀರ ಹಾಗೂ ಖಂಡನೀಯ ಕೃತ್ಯವಾಗಿದೆ.

ಪತ್ರಕರ್ತರ ಮೇಲೆ ದೈಹಿಕ ಹಲ್ಲೆ ಹಾಗೂ ಬೆದರಿಕೆ ನಡೆಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಸಹಿಸಲಾಗದು. ಇದು ಕೇವಲ ಓರ್ವ ಪತ್ರಕರ್ತನ ಮೇಲಿನ ಹಲ್ಲೆಯಲ್ಲ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾ ರಂಗದ ಮೇಲಿನ ನೇರ ದಾಳಿಯಾಗಿದೆ ಎಂದು ಸಂಘ ಟೀಕಿಸಿದೆ.

ಆದ್ದರಿಂದ ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಇತರ ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೆ, ಹಲ್ಲೆ ನಡೆಸಿದ ಆರೋಪಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಕೂಡಲೇ ಬಂಧಿಸಿ, ಕಾನೂನು ಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ.

ಅದೇ ರೀತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಪತ್ರಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪಿ ವೈದ್ಯ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘ ಒತ್ತಾಯಿಸಿದೆ.

ನಿಯೋಗದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಕೋಶಾಧಿಕಾರಿ ಹರೀಶ್ ಕುಂದರ್, ಉಪಾಧ್ಯಕ್ಷ ಪ್ರಭಾಕರ ಆಚಾರ್ಯ ಚಿತ್ತೂರು, ಕಾರ್ಯದರ್ಶಿಗಳಾದ ಉಮೇಶ್ ಮಾರ್ಪಳ್ಳಿ, ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಸುರೇಶ್ ಎರ್ಮಾಳು, ತಾಲೂಕು ಅಧ್ಯಕ್ಷರುಗಳಾದ ನಾಗರಾಜ ರಾಯಪ್ಪನಮಠ, ಹಮೀದ್ ಪಡುಬಿದ್ರೆ, ಉದಯಶಂಕರ್, ರಾಜೇಶ್ ಗಾಣಿಗ ಅಚ್ಲಾಡಿ, ಪ್ರಮುಖರಾದ ಪ್ರಮೋದ್ ಸುವರ್ಣ, ಪ್ರವೀಣ್ ಮುದೂರು, ಅಜಿತ್ ಆರಾಡಿ, ಚೇತನ್ ಮಟಪಾಡಿ, ಪುಂಡಲಿಕ ಮರಾಠೆ, ಗಣೇಶ್ ಬೀಜಾಡಿ, ಶಶಿಧರ್ ಮಾಸ್ತಿಬೈಲು ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version