ಉದ್ಯಮಿಗಳ 19 ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಬಗ್ಗೆ ಸುನೀಲ್ ಕುಮಾರ್ ಮೊದಲು ಮಾತನಾಡಲಿ: ಪ್ರಸಾದ್ ರಾಜ್ ಕಾಂಚನ್

Spread the love

ಉದ್ಯಮಿಗಳ 19 ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಬಗ್ಗೆ ಸುನೀಲ್ ಕುಮಾರ್ ಮೊದಲು ಮಾತನಾಡಲಿ: ಪ್ರಸಾದ್ ರಾಜ್ ಕಾಂಚನ್

  • ಗ್ಯಾರಂಟಿ ಯೋಜನೆಗಳ ಯಶಸ್ಸು ಕಂಡು ಬಿಜೆಪಿ ಶಾಸಕರು ಕಂಗಾಲು – ಗ್ಯಾರಂಟಿ ಸಮಾವೇಶದ ವಿರುದ್ಧ ಅಪಪ್ರಚಾರ ಆರೋಪ

ಉಡುಪಿ: ಕೇಂದ್ರದ ಬಿಜೆಪಿ ಸರ್ಕಾರ ಶ್ರೀಮಂತ ಉದ್ಯಮಿಗಳ ಸುಮಾರು 19 ಲಕ್ಷ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿರುವ ಬಗ್ಗೆ ಶಾಸಕ ವಿ. ಸುನೀಲ್ ಕುಮಾರ್ ಮೊದಲು ಮಾತನಾಡಲಿ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ಶಾಸಕರು ಅಪಸ್ವರ ಎತ್ತುತ್ತಿರುವುದು ಅಸೂಯೆಯ ಮನೋಭಾವವನ್ನು ತೋರಿಸುತ್ತದೆ. ಜನರ ಬದುಕಿಗೆ ಆಸರೆಯಾಗಿರುವ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವುದನ್ನು ಕಂಡು ಬಿಜೆಪಿ ಶಾಸಕರು ಕಂಗಾಲಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜನರಿಗೆ ತಲುಪಿಸುತ್ತಿದೆ. ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಈ ಯೋಜನೆಗಳ ಪ್ರಯೋಜನ ಪಡೆಯುತ್ತಿವೆ.

ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಅವುಗಳ ಪ್ರಯೋಜನವನ್ನು ಗ್ರಾಮಮಟ್ಟದವರೆಗೆ ತಲುಪಿಸುವ ಉದ್ದೇಶದಿಂದ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ. ಆದರೆ, ಈ ಯೋಜನೆಗಳ ಯಶಸ್ಸನ್ನು ಸಹಿಸಲಾಗದೆ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಮಾವೇಶಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬಡವರ ಅನುಕೂಲಕ್ಕಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವ ಬಿಜೆಪಿ ನಾಯಕರ ಮನಸ್ಥಿತಿ ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದ್ದಾರೆ.

ರಾಜ್ಯ ಹಾಗೂ ದೇಶದ ಬಗ್ಗೆ ನಿಜವಾದ ಕಾಳಜಿ ಇದ್ದರೆ ಶಾಸಕ ಸುನೀಲ್ ಕುಮಾರ್ ಮತ್ತು ಇತರ ಬಿಜೆಪಿ ಶಾಸಕರು ಮೊದಲು ಕೇಂದ್ರ ಸರ್ಕಾರ ಶ್ರೀಮಂತ ಉದ್ಯಮಿಗಳ ಸುಮಾರು 19 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿರುವ ಬಗ್ಗೆ ಪ್ರಶ್ನಿಸಲಿ. ಆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಲಿ ಎಂದು ಪ್ರಸಾದ್ ರಾಜ್ ಕಾಂಚನ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


Spread the love
Subscribe
Notify of

0 Comments