ಮಂಗಳೂರು ಸಿಸಿಬಿಯ ಭರ್ಜರಿ ಕಾರ್ಯಾಚರಣೆ: 5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ; ಇಬ್ಬರ ಬಂಧನ
ಮಂಗಳೂರು: “ಡ್ರಗ್ಸ್ ಫ್ರೀ ಮಂಗಳೂರು” ಅಭಿಯಾನದಡಿ ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ದೆಹಲಿಯಿಂದ ಎಂಡಿಎಂಎ ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 5 ಕೋಟಿ 20 ಲಕ್ಷ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೊಹಮ್ಮದ್ ಅಲ್ಫಾಜ್ (28), ಮತ್ತು ಉಜಿರೆ ಲಾಯಿಲಾ ನಿವಾಸಿ ಮೊಹಮ್ಮದ್ ಮುಸ್ತಾಫಾ (28) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಜೂನ್ 25ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯೊಂದರಲ್ಲಿ ಮಾದಕ ವಸ್ತು ಸಂಗ್ರಹಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಅಣ್ಣಪ್ಪ ಸ್ವಾಮಿ @ ಮನು ಎಂಬಾತನನ್ನು ಬಂಧಿಸಿದ್ದರು. ಆತನಿಂದ 15.17 ಗ್ರಾಂ ಎಂಡಿಎಂಎ (ಅಂದಾಜು 1.50 ಲಕ್ಷ ರೂ. ಮೌಲ್ಯ) ವಶಪಡಿಸಿಕೊಂಡು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ತನಿಖೆ ಮುಂದುವರಿಸಿದ ಸಿಸಿಬಿ ಪೊಲೀಸರು, ಆರೋಪಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್ಗಳ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಸಿಸಿಬಿ ತಂಡ ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿತು.

ಆರೋಪಿಗಳ ವಶದಿಂದ 5 ಕೆಜಿ 196 ಗ್ರಾಂ ಎಂಡಿಎಂಎ, ಒಂದು ಬ್ಯಾಗ್ ಹಾಗೂ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಒಟ್ಟು ಮೌಲ್ಯ 5 ಕೋಟಿ 20 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಾರಿನ ಮೂಲಕ ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು, ಬೆಂಗಳೂರು ನಗರವನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಕೇರಳದ ವಿವಿಧ ಭಾಗಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದೇ ವೇಳೆ ಪ್ರಮುಖ ಆರೋಪಿ ಮೊಹಮ್ಮದ್ ಅಲ್ಫಾಜ್ ವಿರುದ್ಧ ಈ ಹಿಂದೆ 2024ರಲ್ಲಿ ಕೊಣಾಜೆ ಪೊಲೀಸ್ ಠಾಣೆ ಹಾಗೂ 2026ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಮಾರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದು, ಮಾದಕ ವಸ್ತು ಜಾಲದ ವಿರುದ್ಧದ ತನಿಖೆ ಇನ್ನಷ್ಟು ತೀವ್ರಗೊಳಿಸಲಾಗಿದೆ.













