ಮಂಗಳೂರು: ದಸರಾ ರಜೆ ನೀಡದೆ ಸೆಮಿಸ್ಟರ್ ಪರೀಕ್ಷೆ ನಡೆಸಲು ಮುಂದಾದ ಕಾಲೇಜು ಆಡಳಿತ; ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ
ಮಂಗಳೂರು: ಮಂಗಳೂರು ದಸರಾ ಮಹೋತ್ಸವದ ಸಂಭ್ರಮದ ನಡುವೆಯೇ ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವ ಮಂಗಳೂರಿನ ಬೆಂದೂರ್ವೆಲ್ ಸಮೀಪದ ಸೈಂಟ್ ಆಗ್ನೆಸ್ ಕಾಲೇಜು ಆಡಳಿತದ ಕ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಗಳನ್ನು ಬಹಿಷ್ಕರಿಸಿದ ನೂರಾರು ವಿದ್ಯಾರ್ಥಿಗಳು ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು.
ಅಕ್ಟೋಬರ್ 12ರಿಂದ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಮಂಗಳೂರು ದಸರಾ ಆಚರಣೆ ಹಾಗೂ ಸಂಭ್ರಮದಲ್ಲಿ ಪಾಲ್ಗೊಳ್ಳಲು ಪರೀಕ್ಷೆಗಳು ಅಡ್ಡಿಯಾಗುತ್ತಿವೆ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಗಳನ್ನು ಮುಂದೂಡುವಂತೆ ಕಾಲೇಜು ಆಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೂ ದೂರು ಸಲ್ಲಿಸಿವೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಬೆಂಬಲ ವ್ಯಕ್ತಪಡಿಸಿದ್ದು, ಸಂಘಟನೆಯ ವಿದ್ಯಾರ್ಥಿ ಮುಖಂಡರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದರೂ ಕಾಲೇಜು ಆಡಳಿತ ಪರೀಕ್ಷೆಗಳನ್ನು ನಡೆಸಲು ಮುಂದಾಗಿದ್ದು, ಪರೀಕ್ಷೆ ಮುಂದೂಡಲು ನಿರಾಕರಿಸಿದೆ. ಇದರಿಂದ ವಿದ್ಯಾರ್ಥಿಗಳ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ.
ಈ ನಡುವೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಎಬಿವಿಪಿ ವಿದ್ಯಾರ್ಥಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ಯಲು ಮುಂದಾದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ವಿದ್ಯಾರ್ಥಿನಿಯರು ಪೊಲೀಸ್ ಜೀಪ್ಗೆ ಅಡ್ಡ ನಿಂತು ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ, ಇನ್ನು ಕೆಲವರು ಪೊಲೀಸ್ ಜೀಪ್ ಎದುರು ಮಲಗಿ ವಿದ್ಯಾರ್ಥಿ ನಾಯಕರನ್ನು ಕರೆದೊಯ್ಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಬಂಧಿತ ವಿದ್ಯಾರ್ಥಿ ನಾಯಕರನ್ನು ಬಿಡುಗಡೆ ಮಾಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದರು. ಪೊಲೀಸ್ ಜೀಪ್ ಎದುರೇ ಪ್ರತಿಭಟನೆ ಮುಂದುವರಿಸಿ, ವಿದ್ಯಾರ್ಥಿ ನಾಯಕರನ್ನು ಯಾವುದೇ ಕಾರಣಕ್ಕೂ ಬಂಧಿಸಿ ಕರೆದೊಯ್ಯಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.
ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ಜೀಪ್ ಅನ್ನು ಬದಿಗೆ ಸರಿಸಿದರು. ಆದರೂ, ಎಬಿವಿಪಿ ವಿದ್ಯಾರ್ಥಿ ನಾಯಕರನ್ನು ಬಿಡುಗಡೆ ಮಾಡಬೇಕು ಹಾಗೂ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಬೇಡಿಕೆಯೊಂದಿಗೆ ವಿದ್ಯಾರ್ಥಿಗಳು ಕಾಲೇಜು ಗೇಟ್ ಎದುರು ಪ್ರತಿಭಟನೆ ಮುಂದುವರಿಸಿದರು.
ದಸರಾ ಹಬ್ಬದ ಸಂದರ್ಭದಲ್ಲಿ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವ ಕಾಲೇಜು ಆಡಳಿತದ ವಿರುದ್ಧ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದ್ದಾರೆ.
