ಮಂಗಳೂರು ಗುಡ್ಡ ಕುಸಿತ ದುರಂತ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ; ಎಚ್ಚರಿಕೆ ವಹಿಸುವಂತೆ ಸಚಿವ ಯು.ಟಿ. ಖಾದರ್ ಮನವಿ

Spread the love

ಮಂಗಳೂರು ಗುಡ್ಡ ಕುಸಿತ ದುರಂತ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ; ಎಚ್ಚರಿಕೆ ವಹಿಸುವಂತೆ ಸಚಿವ ಯು.ಟಿ. ಖಾದರ್ ಮನವಿ

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ದುರಂತದ ಸ್ಥಳಕ್ಕೆ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಪ್ರಕೃತಿ ವಿಕೋಪ ಯಾವಾಗ, ಹೇಗೆ ಸಂಭವಿಸುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಘಟನೆ ನಡೆದ ತಕ್ಷಣ ಸ್ಥಳೀಯರು, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿರುವುದು ಶ್ಲಾಘನೀಯವಾಗಿದ್ದು, ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ದುರಂತದಲ್ಲಿ ಬದುಕುಳಿದವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಈ ಕುರಿತು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿರುವುದಾಗಿ ಹೇಳಿದರು.

ಈ ಘಟನೆ ಕರಾವಳಿ ಭಾಗದ ಜನರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಇಂತಹ ದೊಡ್ಡ ದುರಂತ ಸಂಭವಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಂಗಳೂರು ಪ್ರದೇಶವು ಎತ್ತರ-ತಗ್ಗು ಪ್ರದೇಶಗಳನ್ನು ಹೊಂದಿರುವುದರಿಂದ ಅಧಿಕಾರಿಗಳು ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡಿ ಜನರಿಗೆ ಮುನ್ನೆಚ್ಚರಿಕೆ ನೀಡಲಿದ್ದಾರೆ. ಆದರೆ ಸಾರ್ವಜನಿಕರೂ ಸಹ ಸ್ವಯಂಪ್ರೇರಿತವಾಗಿ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಜಾಗದಲ್ಲಿ ಅಪಾಯಕಾರಿ ಪರಿಸ್ಥಿತಿ ಕಂಡುಬಂದರೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದರೆ ಖಾಸಗಿ ಜಾಗಗಳಲ್ಲಿ ಕಾಂಪೌಂಡ್ ಗೋಡೆ ಅಥವಾ ಕಟ್ಟಡ ಕುಸಿದರೆ ಸರ್ಕಾರಕ್ಕೆ ನೇರವಾಗಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಮನೆಗಳ ದುರಸ್ತಿಯ ಹೊಣೆ ಮನೆ ಮಾಲೀಕರದ್ದಾಗಿದ್ದು, ಈ ಕಾರಣದಿಂದ ನೇರವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ. ಮನೆ ಮಾಲೀಕರಿಗೆ ಪರಿಹಾರ ನೀಡುವ ಮೂಲಕ ಅವರು ಮನೆಗಳನ್ನು ದುರಸ್ತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಖಾಸಗಿ ವ್ಯಕ್ತಿಗಳು ನಿರ್ಮಿಸಿರುವ ಕಟ್ಟಡಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಪರಿಸ್ಥಿತಿ ಉಂಟಾದರೆ ಅದರ ಸಂಪೂರ್ಣ ಹೊಣೆ ಸಂಬಂಧಪಟ್ಟ ಕಟ್ಟಡ ಮಾಲೀಕರದ್ದೇ ಆಗಿರುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ತೊಕ್ಕೊಟ್ಟು ಪ್ರದೇಶದಲ್ಲಿ ಕುಸಿದಿರುವ ತಡೆಗೋಡೆಯ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ ಅವರು, ಈ ಬಗ್ಗೆ ಕಂದಾಯ ಸಚಿವರೊಂದಿಗೆ ಬೆಳಿಗ್ಗೆಯೇ ಚರ್ಚೆ ನಡೆಸಿರುವುದಾಗಿ ಹೇಳಿದರು.

ಸಾರ್ವಜನಿಕರು ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿದ್ದರೆ ಅಥವಾ ಅಪಾಯದ ಸಾಧ್ಯತೆ ಕಂಡುಬಂದರೆ ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ತೆರಳಿ ಸರ್ಕಾರ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಪ್ರಕೃತಿ ವಿಕೋಪವನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲದಿದ್ದರೂ, ಮುನ್ನೆಚ್ಚರಿಕೆ ಮೂಲಕ ಜೀವಹಾನಿಯನ್ನು ತಪ್ಪಿಸಬಹುದು. ಯಾವುದೇ ಅನಾಹುತ ಸಂಭವಿಸದಿರಲಿ ಎಂಬುದೇ ನಮ್ಮ ಪ್ರಾರ್ಥನೆ ಎಂದು ಸಚಿವ ಯು.ಟಿ. ಖಾದರ್ ಹೇಳಿದರು.


Spread the love
Subscribe
Notify of

0 Comments