ಮಂಗಳೂರು: MRPL ಭಾಗದಲ್ಲಿ ಭಾರಿ ಸ್ಫೋಟ: ಜೋಕಟ್ಟೆಯಲ್ಲಿ ಕಂಪಿಸಿದ ಮನೆಗಳು
ಎಂಆರ್ಪಿಎಲ್ (ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಗಂಭೀರ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಹಲವು ಮನೆಗಳು ಕಂಪಿಸಿದ್ದು, ಕೆಲವು ಮನೆಗಳ ಬಾಗಿಲು, ಕಿಟಕಿಗಳು ಉದುರಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಸ್ಫೋಟದ ಬಳಿಕ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ದೂರದ ಪ್ರದೇಶಗಳಿಂದಲೂ ಹೊಗೆ ಗೋಚರಿಸಿದೆ.
ಸ್ಫೋಟಕ್ಕೆ ನಿಖರ ಕಾರಣ ಹಾಗೂ ಘಟನೆಯಲ್ಲಿ ಯಾವುದೇ ಹಾನಿ ಅಥವಾ ಸಾವು–ನೋವಿನ ಬಗ್ಗೆ ಇನ್ನೂ ವರದಿಯಾಗಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿತ ಅಧಿಕಾರಿಗಳು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳದತ್ತ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ
ಅವಘಡದಲ್ಲಿ 9 ಜನರಿಗೆ ಗಾಯಗಳಾಗಿದ್ದು. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿದ್ದಾರೆ.
