ಮಾ.14: ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು, ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು, ಜಿಲ್ಲೆಯ ನಿರಂತರ ಕಡೆಗಣನೆ ಮುಂದುವರಿಸಿದ್ದು ಇದರ ವಿರುದ್ದ ಉಡುಪಿ ನಗರ ಬಿಜೆಪಿ ವತಿಯಿಂದ ಉಡುಪಿಯ ಆದರ್ಶ ಆಸ್ಪತ್ರೆ ಎದುರು ಮಾರ್ಚ್ 14 ರಂದು ಸಂಜೆ 4.30ಕ್ಕೆ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹೇಳಿದರು.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಸ್ತುತ ಸಾಲಿನ ರಾಜ್ಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ನೀಡದೆ ಸರ್ಕಾರವು ಜಿಲ್ಲೆಯ ಅಭಿವೃದ್ಧಿಯನ್ನು ತೀವ್ರವಾಗಿ ಕಡೆಗಣಿಸಿದೆ ಎಂಬ ಆಕ್ರೋಶ ಜಿಲ್ಲೆಯ ಜನರಲ್ಲಿ ಹೆಚ್ಚಾಗಿದೆ. ಕರಾವಳಿ ಭಾಗದ ಜನರು ಆರೋಗ್ಯ, ಶಿಕ್ಷಣ. ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದರೂ, ಈ ಬಾರಿ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ವಿಶೇಷ ಯೋಜನೆಗಳು ಅಥವಾ ಮಹತ್ವದ ಅನುದಾನ ಘೋಷಣೆ ಆಗದಿರುವುದು ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ. ಹೊಸ ಯೋಜನೆಗಳನ್ನು ಘೋಷಿಸುವ ಮಾತಿರಲಿ ಹಳೆ ಯೋಜನೆಗಳನ್ನು ಪೂರ್ಣಗೊಳಿಸುವ ಬಗ್ಗೆ ಹಾಗೂ ನಿರ್ವಹಣೆಗೂ ಅನುದಾನ ನೀಡಿಲ್ಲ.
ರಾಜ್ಯದಲ್ಲಿ ಉಡುಪಿ ಜಿಲ್ಲೆಯ ಅಸ್ತಿತ್ವವನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆತಿದ್ದು, ಉಡುಪಿ ಜಿಲ್ಲೆಯ ಜನರ ದೀರ್ಘಕಾಲದ ಬೇಡಿಕೆಗಳಾದ ಜಿಲ್ಲಾಸ್ಪತ್ರೆ ಕಾಮಗಾರಿ, ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ, ನೂತನ ವಿದ್ಯಾರ್ಥಿನಿಲಯಗಳ ಮಂಜೂರಾತಿ. ಕೃಷಿ ಡಿಗ್ರಿ ಕಾಲೇಜು ಆರಂಭಿಸುವುದು. ಕರಾವಳಿಗೆ ಪ್ರತ್ಯೇಕ ಮರಳು ನೀತಿ, ನೀರಾವರಿ ಯೋಜನೆಗಳು, ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಗಳು, ಸರಕಾರಿ ಬಸ್ ವ್ಯವಸ್ಥೆ ಸದೃಢ ಪಡಿಸುವುದು, ಪ್ರವಾಸೋದ್ಯಮಕ್ಕೆ ಉತ್ತೇಜನ, ಸುಸಜ್ಜಿತ ಕ್ರೀಡಾಂಗಣಗಳ ನಿರ್ಮಾಣ. ಉಪವಿಭಾಗಾಧಿಕಾರಿಗಳ ಕಛೇರಿ ಮಂಜೂರಾತಿ, ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ವಿಶೇಷ ಅನುದಾನ ಮೀಸಲಿರಿಸುವುದೂ ಸೇರಿದಂತೆ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಸರ್ಕಾರದಿಂದ ಯಾವುದೇ ಅನುದಾನ ಘೋಷಣೆ ಆಗದಿರುವುದು ತೀವ್ರ ಅನ್ಯಾಯವಾಗಿದ್ದು, ಜಿಲ್ಲೆಯ ಜನತೆಯ ನಿರೀಕ್ಷೆಗೆ ಈ ಬಾರಿಯ ಬಜೆಟ್ ನಲ್ಲಿ ತಣ್ಣೀರು ಎರಚಿದಂತಾಗಿದೆ. ಇದರ ಪರಿಣಾಮವಾಗಿ ಜಿಲ್ಲೆಯ ಅಭಿವೃದ್ಧಿ ಯೋಜನೆಗಳು ಕೇವಲ ಕನಸಿನ ಮಾತಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂಬ ಆಕ್ರೋಶ ವ್ಯಾಪಕವಾಗಿ ವ್ಯಕ್ತವಾಗಿದೆ.
ಇದೇ ವೇಳೆ ಉಡುಪಿ ಜಿಲ್ಲೆಯ ಪ್ರಮುಖ ಆರ್ಥಿಕ ಆಧಾರವಾಗಿರುವ ಮಲ್ಪೆ ಸರ್ವಋತು ಮೀನುಗಾರಿಕಾ ಬಂದರನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದರೂ ಸಹ, ಈ ಬಾರಿಯ ಬಜೆಟ್ನಲ್ಲಿ ಇಡೀ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದರಿಂದ ಜಿಲ್ಲೆಯ ಜನರ ನಿರೀಕ್ಷೆಗಳು ಭಗ್ನಗೊಂಡಿದ್ದು, ಅಭಿವೃದ್ಧಿ ಕಾರ್ಯಗಳು ಮೂಲೆಗುಂಪಾಗಿವೆ. ಪ್ರತಿ ಬಾರಿಯಂತೆ ಸಿದ್ದರಾಮಯ್ಯ ಕರಾವಳಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೇ ಇರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಯಾವುದೇ ಅನುದಾನ, ಅಭಿವೃದ್ಧಿ ಯೋಜನೆಗಳನ್ನು ನೀಡದೇ ಸೇಡಿನ ರಾಜಕೀಯ ಮಾಡಲು ಮುಂದಾಗಿರುವುದು ಶೋಚನೀಯ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ಅತೀ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ, ದಾಖಲೆಯ 17 ನೇ ಬಜೆಟ್ ಬಗ್ಗೆ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿಯಾಗಿಸಿ ಗರಿಷ್ಠ ಸಾಲವನ್ನು ರಾಜ್ಯದ ಜನತೆಯ ಮೇಲೆ ಹೇರುವ ಮೂಲಕ “ಸಾಲ ರಾಮಯ್ಯ” ರಾಗಿದ್ದಾರೆ. ಅಭಿವೃದ್ಧಿ, ಮೂಲಭೂತ ಸೌಕರ್ಯಗಳು ಹಾಗೂ ಜನರ ಕಲ್ಯಾಣಕ್ಕಾಗಿ ಉಡುಪಿ ಜಿಲ್ಲೆಗೆ ನ್ಯಾಯಸಮ್ಮತ ಬಜೆಟ್ ಅನುದಾನ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಆದರೆ ಜಿಲ್ಲೆಯ ಜನರ ನ್ಯಾಯಸಮ್ಮತ ಹಕ್ಕುಗಳನ್ನು ನಿರ್ಲಕ್ಷಿಸಿರುವುದರಿಂದ ಜನರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳನ್ನೊಳಗೊಂಡು ಉಡುಪಿ ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿದ ತಾರತಮ್ಯದ ಹಾಗೂ ಭ್ರಷ್ಟ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದೇವೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನ್ಯಾಯಸಮ್ಮತ ಅನುದಾನ ನೀಡಬೇಕು. ಇಲ್ಲವಾದರೆ ಜನರ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಅಭಿವೃದ್ಧಿಯನ್ನು ತಡೆಯುವ ಯಾವುದೇ ನಿರ್ಲಕ್ಷ್ಯವನ್ನು ಜನರು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಈ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ನೀಡಲಾಗುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕಿರಣ್ ಕುಮಾರ್, ಪ್ರಭಾಕರ ಪೂಜಾರಿ, ದಿವಾಕರ ಶೆಟ್ಟಿ, ಶ್ರೀವತ್ಸ ಉಪಸ್ಥೀತರಿದ್ದರು.
