ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ

Spread the love

ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು ಎಂಡಿಎಂಎ (MDMA) ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಕೇರಳ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ, 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಗಳ್ಪಾಡಿ ಅಂಚೆ ವ್ಯಾಪ್ತಿಯ ಬೈದಲಾದ ಅನೀಸಾ ಮಂಜಿಲ್ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆಯ ಪಿ. ಬಾವ ಹೌಸ್ ನಿವಾಸಿ ಜಿಯಾವುಲ್ ಹಕ್ (30) ಹಾಗೂ ಮಂಗಳೂರಿನ ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯ ಆಯಿಷಾ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ಸಂಖ್ಯೆ 201ರಲ್ಲಿ ವಾಸವಿರುವ ಅಲ್ತಾಫ್ (28) ಎಂದು ಗುರುತಿಸಲಾಗಿದೆ. ಅಲ್ತಾಫ್‌ನ ಸ್ವಂತ ವಿಳಾಸ ಮಂಗಳೂರಿನ ಬಜಾಲ್ ಗ್ರಾಮದ ಜಲ್ಲಿಗುಡ್ಡೆ ಅಂಚೆ ವ್ಯಾಪ್ತಿಯ ಫೈಸಲ್ ನಗರದ ಸಿರಿಸೀಮೆ ನರ್ಸರಿ ಬಳಿಯಾಗಿದೆ.

ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತುವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಅಕ್ಟೋಬರ್ 8ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ. ಎಂಡಿಎಂಎ ಮಾದಕವಸ್ತುವಿನ ಮೌಲ್ಯ ಸುಮಾರು ₹1.58 ಕೋಟಿ ಎಂದು ಅಂದಾಜಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹವಾಗುವ ಭಾಗದಲ್ಲಿ ಭದ್ರವಾಗಿ ಅಡಗಿಸಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಈ ಜಾಲವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಬಳಿಕ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅಲ್ತಾಫ್ ವಿರುದ್ಧವೂ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಮೂವರು ಆರೋಪಿಗಳನ್ನು ವಿಚಾರಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love
Subscribe
Notify of

0 Comments