ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಅಭಿನಂದನೀಯ ಎಂದು ಮಾಜಿ ಸಚಿವ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.

ರಮೇಶ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ. ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಶ್ಲಾಘನೀಯ ಎಂದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಜನಪರ ಬದ್ಧತೆ ಪ್ರದರ್ಶಿಸಿದೆ. ಯೋಜನೆಗಳ ಪ್ರಯೋಜನವನ್ನು ಇನ್ನಷ್ಟು ಜನರಿಗೆ ತಲುಪಿಸುವ ಕೆಲಸವಾಗಬೇಕು ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ, ಪಕ್ಷ ಸಂಘಟನೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ರಮೇಶ್ ಕಾಂಚನ್ ಅವರಿಂದ ಕಲಿಯಬಹುದು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಮನೆಮನೆಗೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಮೇಶ್ ಕಾಂಚನ್ ಅವರನ್ನು ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ಗೌರವಿಸಲಾಯಿತು.
ಶಿಬಿರದಲ್ಲಿ ನೂರಾರು ಯುವಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರದ ಕಿಟ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಶೋಕ್ ಕುಮಾರ್ ಕೊಡವೂರು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ದಿನಕರ ಹೇರೂರು, ಮಂಜುನಾಥ್ ಸುನಾಗರ, ಪ್ರಶಾಂತ್ ಜತ್ತನ್ನ, ಜ್ಯೋತಿ ಹೆಬ್ಬಾರ್, ದಿನೇಶ್ ಪುತ್ರನ್, ದಿವಾಕರ ಕುಂದರ್, ಸೌರಭ್ ಬಲ್ಲಾಳ್, ಹರೀಶ್ ಕಿಣಿ, ಭುಜಂಗ ಶೆಟ್ಟಿ, ರಾಜು ಪೂಜಾರಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸತೀಶ್ ಕೊಡವೂರು ಸ್ವಾಗತಿಸಿದರು. ದಯಾನಂದ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.












