ನ. 30ರಂದು ಮಂಗಳೂರಿನಲ್ಲಿ ಕರಾವಳಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ
200ಕ್ಕೂ ಅಧಿಕ ಉದ್ಯೋಗದಾತರು, 10 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ಭಾಗವಹಿಸುವ ನಿರೀಕ್ಷೆ
ಮಂಗಳೂರು: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕರಾವಳಿ ಭಾಗದ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ನವೆಂಬರ್ 30ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ 200ಕ್ಕೂ ಅಧಿಕ ಉದ್ಯೋಗದಾತ ಸಂಸ್ಥೆಗಳು ಹಾಗೂ 10,000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹೇಳಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿಸಿಕೊಂಡಿರುವ 10,089 ಅಭ್ಯರ್ಥಿಗಳು, ಯುವನಿಧಿ ಯೋಜನೆಯಡಿ ನೋಂದಾಯಿತ 8,708 ಫಲಾನುಭವಿಗಳು, ಯುವ ಉದ್ಯೋಗ ಸೇತು ಪೋರ್ಟಲ್ನಲ್ಲಿ ಉದ್ಯೋಗಕ್ಕಾಗಿ ನೋಂದಾಯಿಸಿಕೊಂಡಿರುವವರು ಸೇರಿದಂತೆ ಜಿಲ್ಲೆಯ ಇತರ ಉದ್ಯೋಗಾಕಾಂಕ್ಷಿಗಳಿಗೆ ಈ ಮೇಳವು ಉದ್ಯೋಗ ಪಡೆಯಲು ಉತ್ತಮ ಅವಕಾಶ ಕಲ್ಪಿಸಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 17 ಇಂಜಿನಿಯರಿಂಗ್ ಕಾಲೇಜುಗಳು, 11 ಪಾಲಿಟೆಕ್ನಿಕ್ ಕಾಲೇಜುಗಳು, 25 ಸರ್ಕಾರಿ ಮತ್ತು ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳು, 115 ಪದವಿ ಕಾಲೇಜುಗಳು, 210 ಪದವಿ ಪೂರ್ವ ಕಾಲೇಜುಗಳು ಹಾಗೂ 611 ಪ್ರೌಢಶಾಲೆಗಳಿವೆ. ಈ ಶಿಕ್ಷಣ ಸಂಸ್ಥೆಗಳಿಂದ ಪ್ರತಿವರ್ಷ ಸುಮಾರು 65,000ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ಹೊರಬರುತ್ತಿದ್ದು, ಅವರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಈ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳೂ ಮೇಳದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ (ಕಾಂತ) ನಾಯಕ, ಸ್ಥಳೀಯ ಲೋಕಸಭಾ ಸದಸ್ಯರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿದೆ.
