ಮೆಟಾ ಸಂಸ್ಥೆ ಬಿಜೆಪಿ ಏಜೆಂಟ್ನಂತೆ ವರ್ತಿಸುತ್ತಿದೆ: ಐವನ್ ಡಿಸೋಜಾ ಆರೋಪ

Spread the love

ಮೆಟಾ ಸಂಸ್ಥೆ ಬಿಜೆಪಿ ಏಜೆಂಟ್ನಂತೆ ವರ್ತಿಸುತ್ತಿದೆ: ಐವನ್ ಡಿಸೋಜಾ ಆರೋಪ

ಉಡುಪಿ: ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುವ ಮೂಲಕ ಮೆಟಾ ಸಂಸ್ಥೆ ರಾಜಕೀಯ ಪ್ರೇರಿತವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡುವಾಗ ಮೈಕ್ ಬಂದ್ ಮಾಡಲಾಗಿತ್ತು. ಅಲ್ಲಿಂದ ಆರಂಭವಾದ ಬಿಜೆಪಿಯ ವ್ಯವಸ್ಥಿತ ಸಂಚು ಇದೀಗ ಸಾಮಾಜಿಕ ಜಾಲತಾಣಗಳಿಗೂ ವಿಸ್ತರಿಸಿದೆ ಎಂದು ಆರೋಪಿಸಿದರು.

ಸಾಮಾಜಿಕ ಜಾಲತಾಣಗಳು ಸಮಾಜದ ಎಲ್ಲ ವರ್ಗಗಳ ಧ್ವನಿಯಾಗಬೇಕೇ ಹೊರತು, ಯಾವುದೇ ರಾಜಕೀಯ ಪಕ್ಷದ ಮುಖವಾಣಿಯಾಗಬಾರದು. ಆದರೆ, ಮೆಟಾ ಸಂಸ್ಥೆ ಬಿಜೆಪಿ ಮತ್ತು ಆರ್ಎಸ್ಎಸ್ನ ಏಜೆಂಟ್ನಂತೆ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್ನ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ವಿರುದ್ಧ ಧ್ವನಿ ಎತ್ತುವವರ ಅಭಿಪ್ರಾಯಗಳಿಗೆ ಕಡಿವಾಣ ಹಾಕಲಾಗುತ್ತಿದೆ. ಮೆಟಾ ಸಂಸ್ಥೆ ಬಿಜೆಪಿ ‘ಬೇಟಾ’ ಆಗಿ ಕೆಲಸ ಮಾಡುತ್ತಿರುವುದು ದುರದೃಷ್ಟಕರ ಹಾಗೂ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿ, ಯುವ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಧ್ವನಿ ಎತ್ತುವ ನಾಯಕರ ವಿಡಿಯೊ ಮತ್ತು ಬರಹಗಳನ್ನು ಅಳಿಸಲಾಗುತ್ತಿದೆ. ಬಳಿಕ ಅವರ ಖಾತೆಗಳನ್ನೇ ಬಂದ್ ಮಾಡುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಮೆಟಾ ಸಂಸ್ಥೆ ಮಾಡುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ನವೀನ್ ಸಾಲಿಯಾನ್, ಡಾ. ಸುನೀತಾ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


Spread the love
Subscribe
Notify of

0 Comments