ತ್ರಾಸಿ ಬೀಚ್ ಅಭಿವೃದ್ಧಿಗೆ ವೇಗ: ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣ : ಸಚಿವ ಕೆ.ಜೆ. ಜಾರ್ಜ್

Spread the love

ತ್ರಾಸಿ ಬೀಚ್ ಅಭಿವೃದ್ಧಿಗೆ ವೇಗ: ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣ : ಸಚಿವ ಕೆ.ಜೆ. ಜಾರ್ಜ್

  • 9 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ. ಸ್ಕೈವಾಕ್, ಸಾಹಸ ಉದ್ಯಾನವನಕ್ಕೆ ಯೋಜನೆ

ಕುಂದಾಪುರ: ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಟೆಂಪಲ್ ಟೂರಿಸಮ್‌ಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ತ್ರಾಸಿ ಬೀಚ್ ಅಭಿವೃದ್ಧಿಗೆ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ರಾಜ್ಯದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ತ್ರಾಸಿ ಬೀಚ್‌ಗೆ ಭೇಟಿ ನೀಡಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ತ್ರಾಸಿ ಬೀಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66 ದಾಟಲು ಪ್ರವಾಸಿಗರಿಗೆ ಅನುಕೂಲವಾಗುವಂತೆ ಸ್ಕೈವಾಕ್ ನಿರ್ಮಿಸಲಾಗುವುದು. ಸುಮಾರು ಏಳು ಎಕರೆ ಪ್ರದೇಶದಲ್ಲಿ ಸಾಹಸ ಉದ್ಯಾನವನ ಹಾಗೂ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಯೋಜನೆಯೂ ಇದೆ ಎಂದು ಸಚಿವರು ತಿಳಿಸಿದರು.

ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಸ್ಥಳೀಯರಿಗೆ ಅಗತ್ಯ ತರಬೇತಿ ನೀಡಿ ಲೈಫ್‌ಗಾರ್ಡ್‌ಗಳಾಗಿ ನೇಮಕ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ತ್ರಾಸಿಯಿಂದ-ಮರವಂತೆವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಪ್ರವಾಸಿಗರು ಅಪಾಯಕಾರಿ ರೀತಿಯಲ್ಲಿ ಸಮುದ್ರಕ್ಕಿಳಿಯುವುದನ್ನು ತಡೆಯಲು ತಡೆಬೇಲಿ ನಿರ್ಮಿಸುವ ಕುರಿತೂ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ವಿದ್ಯುತ್ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಮೂರು ವರ್ಷಗಳ ಹಿಂದೆ ಸುಮಾರು 10 ಸಾವಿರ ಮೆಗಾವ್ಯಾಟ್‌ನಷ್ಟಿದ್ದ ವಿದ್ಯುತ್ ಬೇಡಿಕೆ ಇದೀಗ 18 ಸಾವಿರ ಮೆಗಾವ್ಯಾಟ್‌ಗೆ ಏರಿಕೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಜಲವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ ಬೀರಿದೆ ಎಂದು ಜಾರ್ಜ್ ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳು ಹಾಗೂ ಸಬ್‌ಸ್ಟೇಶನ್‌ಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ನಡೆಯುತ್ತಿದೆ. ಸರ್ಕಾರದಿಂದ ಲೋಡ್‌ಶೆಡ್ಡಿಂಗ್‌ಗೆ ಯಾವುದೇ ಅಧಿಕೃತ ಆದೇಶ ನೀಡಿಲ್ಲ. ಕೆಲವೆಡೆ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳಿಂದ ವಿದ್ಯುತ್ ವ್ಯತ್ಯಯವಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಲೈನ್‌ಮ್ಯಾನ್ ನೇಮಕಾತಿಯಲ್ಲಿ ಸ್ಥಳೀಯ ಅಭ್ಯರ್ಥಿಗಳು ಹೆಚ್ಚಿನ ಆಸಕ್ತಿ ತೋರದ ಕಾರಣ ಬೇರೆ ಜಿಲ್ಲೆಗಳ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕಗೊಂಡವರಿಗೆ ಒಂಬತ್ತು ವರ್ಷಗಳವರೆಗೆ ವರ್ಗಾವಣೆಗೆ ಅವಕಾಶವಿರುವುದಿಲ್ಲ. ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಲೈನ್‌ಮ್ಯಾನ್‌ಗಳ ವರ್ಗಾವಣೆಯಿಂದ ಉಂಟಾಗುವ ಕೊರತೆಯನ್ನು ಸರಿದೂಗಿಸಲು ಹೊಸ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ವಾರಾಹಿ ಪಂಪ್ ಸ್ಟೋರೇಜ್‌ಗೆ ಡಿಪಿಆರ್:
ಶರಾವತಿ ನದಿಗೆ ನೆಹರು ಅವರ ಕಾಲದಲ್ಲಿ ಅಣೆಕಟ್ಟು ನಿರ್ಮಾಣವಾದ ಬಳಿಕ ಹೊಸ ಅಣೆಕಟ್ಟು ನಿರ್ಮಾಣವಾಗಿಲ್ಲ. ಪ್ರಸ್ತುತ 125 ಎಕರೆ ಪ್ರದೇಶದಲ್ಲಿ ಪಂಪ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಯೋಜನೆ ಸಿದ್ಧಪಡಿಸಿ ರಾಜ್ಯ ಸರ್ಕಾರದ ಅನುಮತಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಕೇಂದ್ರ ಸರ್ಕಾರದ ಅಧ್ಯಯನ ತಂಡ ಭೇಟಿ ನೀಡಿ ವರದಿ ನೀಡಿದ್ದು, ತಂಡ ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಆದರೆ ಈವರೆಗೆ ಕೇಂದ್ರ ಸರ್ಕಾರದಿಂದ ಯೋಜನೆಗೆ ಅನುಮತಿ ದೊರೆತಿಲ್ಲ. ಕೇಂದ್ರ ಹಾಗೂ ರಾಜ್ಯ ಪರಿಸರ ಇಲಾಖೆಗಳ ಅನುಮತಿಯೂ ಅಗತ್ಯವಿದೆ. ವಾರಾಹಿ ಪಂಪ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಸಿದ್ದರಾಮಯ್ಯ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು:
ಮುಂದಿನ ಸಿಎಂ ಸಿದ್ದರಾಮಯ್ಯ ಎಂದ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಜಾರ್ಜ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ನಾಯಕರು ಹಾಗೂ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ. ಅವರು ಮತ್ತೆ ಮುಖ್ಯಮಂತ್ರಿಯಾಗುವ ವಿಚಾರ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮಮೋಹನ ಪ್ರಸಾದ್, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಜೆ.ಆರ್. ಲೋಬೋ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಮುಖಂಡರಾದ ಪ್ರದೀಪ್ ಕುಮಾರ್ ಶೆಟ್ಟಿ, ಸ್ಥಳೀಯ ಮುಖಂಡರಾದ ಹರೀಶ್ ಕೊಡಪಾಡಿ, ರಾಜು ಪೂಜಾರಿ, ರಾಜು ಮೆಂಡನ್, ದಿನೇಶ್ ಪೂಜಾರಿ ಗಂಗೊಳ್ಳಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ವಿಂದ್ಯಾ ಎನ್.ಎಂ., ಪ್ರವಾಸೋದ್ಯಮ ಹಾಗೂ ಮೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಗಳು, ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್ ಉಪಸ್ಥಿತರಿದ್ದರು.


Spread the love
Subscribe
Notify of

0 Comments