ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಡಾ ಅಧ್ಯಕ್ಷರ ಕಾರ್ಯಪ್ರವೃತ್ತಿ
ಮಂಗಳೂರು: ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಮನವಿಯ ಮೇರೆಗೆ ಮಂಗಳೂರಿನಲ್ಲಿ ಬೃಹತ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಹಾಗೂ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಪರಿಶೀಲನೆ ಕೈಗೊಳ್ಳಲಾಗಿದೆ. ನಗರದ ತಣ್ಣೀರುಬಾವಿ, ಬೆಂಗ್ರೆ, ಬೋಂದೆಲ್, ಮುಳೂರು, ಕಂದಾವರ, ಕುಡುಪು ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಮುಡಾ ಅಧ್ಯಕ್ಷರು, ಕ್ರೀಡಾಂಗಣ ನಿರ್ಮಾಣಕ್ಕೆ ಸೂಕ್ತವಾದ ಸ್ಥಳಗಳ ಕುರಿತು ಪರಿಶೀಲನೆ ನಡೆಸಿದರು.
ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಗೊಂಡರೆ ಸ್ಥಳೀಯ ಕ್ರಿಕೆಟ್ ಆಟಗಾರರಿಗೆ ಉತ್ತಮ ತರಬೇತಿ ಹಾಗೂ ಕ್ರೀಡಾ ಸೌಲಭ್ಯಗಳು ಲಭ್ಯವಾಗಲಿವೆ. ಅಲ್ಲದೆ, ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಹೆಚ್ಚಿನ ಅವಕಾಶಗಳು ದೊರೆಯುವುದರೊಂದಿಗೆ ಕರಾವಳಿ ಭಾಗದ ಕ್ರೀಡಾ ಕ್ಷೇತ್ರದ ಬೆಳವಣಿಗೆಗೂ ಉತ್ತೇಜನ ಸಿಗುವ ನಿರೀಕ್ಷೆಯಿದೆ.
ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.













