ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ಪ್ರಮುಖ ಆರೋಪಿ ರಾಜು ಎಂಬಾತನಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದು, ಆತನ ಕಾಲಿಗೆ ಗಾಯವಾಗಿದೆ.
ಆಗಸ್ಟ್ 7ರಂದು ಸಂಜೆ ಸುಮಾರು 3.45ರ ವೇಳೆಗೆ ಕಾಪು ತಾಲೂಕು ಮುದರಂಗಡಿಯ ಸೇಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿರುವ ಪ್ರಿನ್ಸ್ ಎಂಟರ್‌ಪ್ರೈಸಸ್ ಕಚೇರಿಗೆ ಡೇವಿಡ್ ಡಿಸೋಜಾ ಅವರು ಆಗಮಿಸಿದ್ದರು. ಬಳಿಕ ತಮ್ಮ ಥಾರ್ ವಾಹನದ ಚಾಲಕನ ಬದಿಯ ಬಾಗಿಲ ಬಳಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದಿದ್ದ ಅಪರಿಚಿತರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಆರೋಪಿಗಳ ಪೈಕಿ ಓರ್ವ ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಡೇವಿಡ್ ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಸ್ಸಿನಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳು
ಪ್ರಕರಣದ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್ಸಿನಲ್ಲಿ ಭಟ್ಕಳದತ್ತ ತೆರಳುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಬೈಂದೂರಿನ ಒತ್ತಿನಣೆ ಬಳಿ ಬಸ್ಸನ್ನು ತಡೆದು ಪೊಲೀಸರು ತಪಾಸಣೆ ನಡೆಸಿದರು.
ಈ ವೇಳೆ ಬಸ್ಸಿನಲ್ಲಿದ್ದ ಮೂವರು ಆರೋಪಿಗಳು ಕೆಳಗಿಳಿದು ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಬೆನ್ನಟ್ಟಿ ಅವರನ್ನು ಹಿಡಿಯಲು ಮುಂದಾದರು. ಈ ಸಂದರ್ಭದಲ್ಲಿ ಆರೋಪಿಗಳ ಪೈಕಿ ರಾಜು (42), ಥಾಣಾ ಪಿಲ್ವ, ಉತ್ತರ ಪ್ರದೇಶ ಎಂಬಾತ ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ಅವರನ್ನು ದೂಡಿ, ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ರಾಜು ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಆತನ ಬಳಿಯಿದ್ದ ಪಿಸ್ತೂಲ್‌ನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ರಾಜುವನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪಿಎಸ್‌ಐ ತೇಜಸ್ವಿ ಅವರಿಗೂ ಕಾರ್ಯಾಚರಣೆಯ ವೇಳೆ ಗಾಯಗಳಾಗಿದ್ದು, ಅವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಕುಮಟಾ, ಭಟ್ಕಳದಲ್ಲಿ ಇಬ್ಬರು ಆರೋಪಿಗಳ ಬಂಧನ
ಪರಾರಿಯಾಗಿದ್ದ ಇನ್ನಿಬ್ಬರು ಆರೋಪಿಗಳಾದ ಅಜಯ್ ರಸ್ತೋಗಿ @ ಅನ್ಮೋಲ್ (23), ಉತ್ತರಾಖಂಡ ಎಂಬಾತನನ್ನು ಕುಮಟಾ ಪೊಲೀಸರ ಸಹಕಾರದಿಂದ ಕುಮಟಾದಲ್ಲಿ ಹಾಗೂ ಜಿಯಾಹುಲ್ ವಜೂಲ್ ಶೇಖ್ @ ದೀಪಕ್ (38), ಬಿಹಾರ ಎಂಬಾತನನ್ನು ಭಟ್ಕಳ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ
ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಮೋಟಾರು ಸೈಕಲ್‌ನ್ನು ಎರ್ಮಾಳ್‌ನಲ್ಲಿ ಬಿಟ್ಟು ಹೋಗಿದ್ದರು ಎನ್ನಲಾಗಿದ್ದು, ಪೊಲೀಸರು ಬೈಕ್‌ನ್ನು ವಶಕ್ಕೆ ಪಡೆದಿದ್ದಾರೆ.
ಹಣಕಾಸಿನ ವೈಮನಸ್ಸೇ ಕೊಲೆಗೆ ಕಾರಣ?
ಪ್ರಾಥಮಿಕ ತನಿಖೆಯ ಪ್ರಕಾರ, ಡೇವಿಡ್ ಡಿಸೋಜಾ ಅವರು ನಡೆಸುತ್ತಿದ್ದ ಕಾಮಗಾರಿಗೆ ಸಂಬಂಧಿಸಿದಂತೆ ಅನ್ಯ ರಾಜ್ಯದ ಕಂಪೆನಿಯೊಂದಿಗಿನ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಡೇವಿಡ್ ಅವರನ್ನು ಹತ್ಯೆ ಮಾಡಲು ಸುಪಾರಿ ನೀಡಿರುವ ಸಾಧ್ಯತೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೊಲೆ ಕೃತ್ಯಕ್ಕೆ ಸಹಕರಿಸಿದವರು, ಹಣಕಾಸಿನ ನೆರವು ನೀಡಿದವರು ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದವರ ಪತ್ತೆಗಾಗಿ ತನಿಖೆ ಮುಂದುವರಿದಿದೆ.
ಉಡುಪಿ ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಅವರ ನೇತೃತ್ವದಲ್ಲಿ ವಿವಿಧ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದ್ದು, ಭಟ್ಕಳ ಮತ್ತು ಕುಮಟಾ ಪೊಲೀಸರು, ಜಿಲ್ಲಾ ಅಪರಾಧ ಪರಿಶೀಲನಾ ಘಟಕ, ಬೆರಳಚ್ಚು ವಿಭಾಗ, ಶ್ವಾನದಳ ಹಾಗೂ ಸಿಡಿಆರ್ ಸೆಲ್ ಸೇರಿದಂತೆ ಹಲವು ತಂಡಗಳು ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ.
