ಮುಲ್ಕಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ

Spread the love

ಮುಲ್ಕಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ

₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆಯ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ

ಮುಲ್ಕಿ: ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಅಂತರ ಜಿಲ್ಲಾ ಕಳ್ಳರ ತಂಡವನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 1ರಂದು ಮಧ್ಯರಾತ್ರಿ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರದ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕೊರ್ದಬ್ಬು ದೈವದ ಬೆಲೆಬಾಳುವ ಮೂರ್ತಿಗಳು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸೆಪ್ಟೆಂಬರ್ 6ರಂದು ಮುಲ್ಕಿ ಕಾರ್ನಾಡಿನಲ್ಲಿ ಜಾಹೀದ್ ಸಿನಾನ್ ಮತ್ತು ಯಾಸೀನ್ ಎಂಬುವರನ್ನು ಬಂಧಿಸಿದ್ದಾರೆ. ಬಳಿಕ ಸೆಪ್ಟೆಂಬರ್ 7ರಂದು ದಾವಣಗೆರೆಯಲ್ಲಿ ಮಹಮದ್ ಅಫ್ರಿದಿ ಹಾಗೂ ಎಸ್.ಕೆ. ಅಬ್ದುಲ್ ಜುಮ್ಮಾನ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಹೆಜಮಾಡಿಯ ಜಾಹೀದ್ ಸಿನಾನ್ (36), ಕಾರ್ಕಳ ತಾಲೂಕಿನ ಯಾಸೀನ್ (36), ದಾವಣಗೆರೆಯ ಮಹಮದ್ ಅಫ್ರಿದಿ (26) ಹಾಗೂ ಎಸ್.ಕೆ. ಅಬ್ದುಲ್ ಜುಮ್ಮಾನ್ (26) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಆರೋಪಿಗಳಿಂದ ಸುಮಾರು 4 ಕೆ.ಜಿ. 521 ಗ್ರಾಂ ಬೆಳ್ಳಿ ಹಾಗೂ 34.820 ಗ್ರಾಂ ಚಿನ್ನ ಸೇರಿದಂತೆ ಒಟ್ಟು ಅಂದಾಜು ₹11.20 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಕಾರು ಸೇರಿದಂತೆ ಸುಮಾರು ₹6 ಲಕ್ಷ ಮೌಲ್ಯದ ವಾಹನಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಟ್ಟಾರೆ ₹17.20 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಬಂಧನದ ಬಳಿಕ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಗಳೂ ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಲ್ಕಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ಬಂಧಿತನಾಗಿರುವ ಮೊದಲ ಆರೋಪಿ ಜಾಹೀದ್ ಸಿನಾನ್ ವಿರುದ್ಧ ಈ ಹಿಂದೆ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ. ಅವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಮುಲ್ಕಿ ಠಾಣೆಯ ಪಿಎಸ್‌ಐ ರಾಘವೇಂದ್ರ ನಾಯಕ್ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪೊಲೀಸರ ತಂಡ ಆರೋಪಿಗಳನ್ನು ಬಂಧಿಸುವುದರ ಜೊತೆಗೆ ಕಳವು ಮಾಡಲಾದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.


Spread the love
Subscribe
Notify of

0 Comments