ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ
ಮಂಗಳೂರು: ಮಂಗಳೂರು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರು ಗುರುವಾರ, ನ. 19ರಂದು ಅಧಿಕಾರ ಸ್ವೀಕರಿಸಿದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡರು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಕರ್ನಾಟಕ ಸರ್ಕಾರ ನ. 18ರಂದು ಹಲವು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿತ್ತು. ಹೊಸ ಹುದ್ದೆಯ ನಿರೀಕ್ಷೆಯಲ್ಲಿದ್ದ ಎನ್. ಶಶಿಕುಮಾರ್ ಅವರನ್ನು ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ ನೇಮಕ ಮಾಡಲಾಗಿತ್ತು.
ಇದಕ್ಕೂ ಮೊದಲು ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಪಶ್ಚಿಮ ವಲಯದ ಐಜಿಪಿಯಾಗಿ ಮಂಗಳೂರಿಗೆ ಮರಳಿರುವ ಅವರು, ತಮ್ಮ ಪೊಲೀಸ್ ಸೇವೆಯಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.













