Home Mangalorean News Kannada News ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ದಕ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ನಾಗರಪಂಚಮಿ ಸಂಭ್ರಮ

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ದಕ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ನಾಗರಪಂಚಮಿ ಸಂಭ್ರಮ

Spread the love

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ದಕ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ನಾಗರಪಂಚಮಿ ಸಂಭ್ರಮ

ಮಂಗಳೂರು: ಕರಾವಳಿಯಾದ್ಯಂತ ನಾಗರಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ ಸೇರಿದಂತೆ ವಿವಿಧ ನಾಗಕ್ಷೇತ್ರಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಗ್ಗಿನ ಪೂಜೆಯ ಬಳಿಕ ನಾಗದೇವರಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ ಹಾಗೂ ಜಲಾಭಿಷೇಕ ಸೇವೆಗಳು ನಡೆಯಿತು. ಬಳಿಕ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಭಕ್ತರು ಹಾಲು ಹಾಗೂ ಎಳನೀರಿನ ಅಭಿಷೇಕ ಸೇವೆ ಸಲ್ಲಿಸಿ ನಾಗದೇವರಿಗೆ ಪೂಜೆ ನೆರವೇರಿಸಿದರು. ಆಶ್ಲೇಷಾ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ, ಶೇಷ ಸೇವೆ ಹಾಗೂ ಕಾರ್ತಿಕ ಪೂಜೆ ಸೇರಿದಂತೆ ವಿವಿಧ ಸೇವೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದರು.

ದೇವಳದ ಹೊರಾಂಗಣದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ವಿವಿಧ ಸೇವೆಗಳನ್ನು ಸಮರ್ಪಿಸಿದರು. ನಾಗರಪಂಚಮಿ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ದಿನವಿಡೀ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ವಿಶೇಷ ಪೂಜೆ ಹಾಗೂ ಧಾರ್ಮಿಕ ವಾತಾವರಣ ಕಳೆಗಟ್ಟಿತ್ತು.


Spread the love

Exit mobile version