ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ.
ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು.
ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ವಿನಯ ಹೆಗ್ಡೆ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದವರು. ತಂದೆಯ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಬಳಿಕ ಈ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರಲ್ಲಿ ವೈದ್ಯಕೀಯ, ಇಂಜಿನಿಯರಿಂಗ್, ದಂತ ವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜುಗಳು ಸೇರಿವೆ.
ಮಂಗಳೂರಿನ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿಯಾದ ಅವರು ಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್, ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.
ರಾಜ್ಯದ ಹಲವು ಸಮಿತಿಗಳಲ್ಲಿ ಮತ್ತು ಕೈಗಾರಿಕಾ ಅವರು ಒಕ್ಕೂಟಗಳಲ್ಲಿ ತೊಡಗಿಸಿಕೊಂಡಿದ್ದರು. ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.
