ಗ್ಯಾರಂಟಿ ಸಮಾವೇಶದ ಖರ್ಚಿಗೆ ಗ್ರಾಮ ಪಂಚಾಯತ್ ಗಳಿಂದ ತಲಾ ₹25 ಸಾವಿರ ಸಂಗ್ರಹಕ್ಕೆ ಆದೇಶ: ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ
ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ಗಿಮಿಕ್ ಗಾಗಿ ನಡೆಸುತ್ತಿರುವ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಖರ್ಚಿಗಾಗಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ತಲಾ 25 ಸಾವಿರ ಮೊತ್ತವನ್ನು ನೀಡುವಂತೆ ಟಾರ್ಗೆಟ್ ಫಿಕ್ಸ್ ಮಾಡಿರುವ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ರಾಜಕೀಯ ಲಾಭದ ದೃಷ್ಟಿಯಲ್ಲಿ ನಡೆಸಲು ಮುಂದಾಗಿರುವ ಸಮಾವೇಶಕ್ಕೆ ಸಾರ್ವಜನಿಕರ ತೆರಿಗೆಯ ಹಣವನ್ನು ನೀಡಲು ಗ್ರಾಮ ಪಂಚಾಯತ್ ಗಳು ಕಡ್ಡಾಯವಾಗಿ ನೀಡುವಂತೆ ಆದೇಶ ಹೊರಡಿಸಿರುವುದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಕೈಗನ್ನಡಿಯಾಗಿದೆ.
ಗ್ಯಾರಂಟಿ ಯೋಜನೆಗಳನ್ನು ಅವೈಜ್ಞಾನಿಕ ರೀತಿಯಲ್ಲಿ ಅನುಷ್ಠಾನ ಮಾಡಿ ರಾಜ್ಯದ ಆರ್ಥಿಕ ಬೊಕ್ಕಸವನ್ನು ದಿವಾಳಿ ಮಾಡಿ ಇದೀಗ ಗ್ರಾಮ ಪಂಚಾಯತ್ ನಲ್ಲಿ ಗ್ರಾಮದ ಅಭಿವೃದ್ಧಿಗೆ ವಿನಿಯೋಗಿಸಬೇಕಾದ ಮೊತ್ತವನ್ನು ರಾಜಕೀಯ ಪ್ರೇರಿತ ಕಾರ್ಯಕ್ರಮಕ್ಕೆ ಖರ್ಚು ಮಾಡಲು ಮುಂದಾಗುವ ಮೂಲಕ ಗ್ರಾಮ ಪಂಚಾಯತ್ ಗಳನ್ನೂ ದಿವಾಳಿಯಾಗಿಸಲು ಮುಂದಾಗಿದ್ದಾರೆ.
ರಾಜ್ಯ ಸರ್ಕಾರ ತಕ್ಷಣ ಗ್ರಾಮ ಪಂಚಾಯತ್ ಗಳ ತೆರಿಗೆ ಹಣವನ್ನು ಗ್ಯಾರಂಟಿ ಸಮಾವೇಶದ ಊಟೋಪಚಾರಕ್ಕೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.
