ದರ ಏರಿಕೆಯಿಂದ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯ: ತಕ್ಷಣ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಮನವಿ
ಉಡುಪಿ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಪ್ರತಿದಿನ ನೀಡುತ್ತಿರುವ ಮೊಟ್ಟೆಯ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಮೊಟ್ಟೆಯು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಪ್ರೋಟೀನ್ ಮತ್ತು ಇತರೆ ಪೌಷ್ಟಿಕಾಂಶಗಳನ್ನು ಒದಗಿಸುವ ಪ್ರಮುಖ ಆಹಾರವಾಗಿದ್ದು, ಸರಕಾರವು ಶಾಲಾ ಮಕ್ಕಳಿಗೆ ಉಚಿತವಾಗಿ ಮೊಟ್ಟೆ ವಿತರಿಸುತ್ತಿರುವುದು ಅತ್ಯಂತ ಶ್ಲಾಘನಾರ್ಹ.
ರಾಜ್ಯ ಸರಕಾರವು ಮೊಟ್ಟೆಯೊಂದರ ಖರೀದಿಗೆ 6 ರೂಪಾಯಿಗಳಂತೆ ಶಾಲೆಗಳಿಗೆ ಬಿಡುಗಡೆ ಮಾಡುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಮೊಟ್ಟೆಯ ಬೆಲೆಯು ಗಣನೀಯವಾಗಿ ಏರಿಕೆಯಾಗಿದ್ದು, ವಿದ್ಯಾರ್ಥಿಗಳಿಗಾಗಿ ಮುಖ್ಯ ಶಿಕ್ಷಕರು ರೂ. 10 ನೀಡಿ ಖರೀದಿಸುವಂತಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವಲ್ಲಿ ಆರ್ಥಿಕವಾಗಿ ತೊಂದರೆಗಳು ಎದುರಾಗುತ್ತಿದ್ದು, ಪರಿಸ್ಥಿತಿ ಮುಂದುವರಿದರೆ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನಿರಂತರವಾಗಿ ಒದಗಿಸುವಲ್ಲಿ ಅಡಚಣೆ ಉಂಟಾಗುವ ಆತಂಕವಿದೆ.
ಆದುದರಿಂದ ಈ ಬಗ್ಗೆ ತುರ್ತಾಗಿ ಗಮನಹರಿಸಿ, ಸರಕಾರಿ ಶಾಲಾ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯ ದೃಷ್ಟಿಯಿಂದ ಮಾರುಕಟ್ಟೆ ದರದಲ್ಲಿ ಮೊಟ್ಟೆ ಖರೀದಿಗೆ ಸೂಕ್ತ ಅವಕಾಶ ಕಲ್ಪಿಸಿ, ಸರಕಾರದ ಮಹತ್ತರ ಕಾರ್ಯಕ್ರಮವನ್ನು ನಿರಾತಂಕವಾಗಿ ಮುಂದುವರಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.













