ನ. 3-7 ರ ವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಉಡುಪಿ: ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಉಡುಪಿ ತಾಲೂಕಿನ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 3 ರಿಂದ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 7 ರ ರಾತ್ರಿ 10 ಗಂಟೆಯ ವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ವರದಿಯನ್ನು ಆಧರಿಸಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರಡಿ ತಮಗೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಸಂಬಂಧಪಟ್ಟ ಪ್ರದೇಶದಲ್ಲಿ ಧರಣಿ, ಪ್ರತಿಭಟನೆ, ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಮುಷ್ಕರಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ನಿಷೇಧಿತ ಪ್ರದೇಶದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಶಸ್ತ್ರಾಸ್ತ್ರಗಳು, ಬಂದೂಕು, ಚೂರಿ, ಲಾಠಿ, ದೊಣ್ಣೆ ಸೇರಿದಂತೆ ವ್ಯಕ್ತಿಗಳ ಜೀವಕ್ಕೆ ಅಪಾಯ ಉಂಟುಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳು, ಕ್ಷಾರ ಪದಾರ್ಥಗಳು, ಸ್ಫೋಟಕ ಹಾಗೂ ದಹನಕಾರಿ ವಸ್ತುಗಳನ್ನು ಪ್ರದೇಶಕ್ಕೆ ತರುವುದು ಅಥವಾ ಸಂಗ್ರಹಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಕಲ್ಲು ಅಥವಾ ಇತರ ವಸ್ತುಗಳನ್ನು ಎಸೆಯಲು ಬಳಸಬಹುದಾದ ಸಾಧನಗಳನ್ನು ಕೊಂಡೊಯ್ಯುವುದನ್ನೂ ನಿಷೇಧಿಸಲಾಗಿದೆ. ಮಾನವ ಶವಗಳು, ಅವುಗಳ ಆಕೃತಿಗಳು ಅಥವಾ ಪ್ರತಿಮೆಗಳನ್ನು ಪ್ರದರ್ಶಿಸುವುದು ಹಾಗೂ ದಹನ ಮಾಡುವುದಕ್ಕೂ ಅವಕಾಶವಿರುವುದಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದು, ಹಾಡುಗಳನ್ನು ಹಾಡುವುದು, ವಾದ್ಯಗಳನ್ನು ಬಾರಿಸುವುದು, ಭಾಷಣ ಮಾಡುವುದು, ಸನ್ನೆ ಅಥವಾ ಅಣಕು ಪ್ರದರ್ಶನಗಳ ಮೂಲಕ ಸಾರ್ವಜನಿಕ ಸಭ್ಯತೆ ಮತ್ತು ನೈತಿಕತೆಗೆ ಧಕ್ಕೆ ತರುವ ಕೃತ್ಯಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಅಲ್ಲದೆ, ಪ್ರಚೋದನಕಾರಿ ಹಾಗೂ ಉದ್ರೇಕಕಾರಿ ಹಾಡುಗಳು ಮತ್ತು ಘೋಷಣೆಗಳನ್ನು ಕೂಗುವುದು, ವ್ಯಕ್ತಿಗಳ ತೇಜೋವಧೆ ಮಾಡುವ ಚಿತ್ರಗಳು, ಚಿಹ್ನೆಗಳು ಹಾಗೂ ಪ್ರತಿಕೃತಿಗಳನ್ನು ಪ್ರದರ್ಶಿಸುವುದು ಸೇರಿದಂತೆ ಸಾರ್ವಜನಿಕ ಶಾಂತಿ, ನೈತಿಕತೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದನ್ನು ನಿರ್ಬಂಧಿಸಲಾಗಿದೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಮಾರಕಾಸ್ತ್ರಗಳು, ಸ್ಫೋಟಕ, ವಿನಾಶಕಾರಿ ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಇಂತಹ ವಸ್ತುಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.













