ಆಗ್ನೆಸ್ ಕಾಲೇಜು ಬಳಿ ಪ್ರತಿಭಟನೆ; ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ
ಮಂಗಳೂರು: ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ನೀಡುವಂತೆ ಒತ್ತಾಯಿಸಿದ್ದಾರೆ ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ದೇಶಪ್ರೇಮದ ಹೆಸರಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪೊಲೀಸರು ಖಾಕಿ ಧರಿಸುವಾಗಲೇ ದೇಶದ ರಕ್ಷಣೆಗಾಗಿ ಬದ್ಧತೆ ತೋರುವ ಪ್ರತಿಜ್ಞೆ ಮಾಡುತ್ತಾರೆ. ಆದರೆ, ದೇಶಪ್ರೇಮ ಮತ್ತು ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಬಳಸಿಕೊಂಡು ಯಾರೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ತಿಳಿಸಿದ್ದಾರೆ.
ದೇಶದ ಪರವಾಗಿ ಘೋಷಣೆ ಕೂಗುವ ಮೂಲಕ ತಾವು ಮಾಡಿದ ತಪ್ಪುಗಳನ್ನು ಮುಚ್ಚಿಹಾಕಲು ಅಥವಾ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುವುದರಿಂದ ದೇಶಕ್ಕೆ ಗೌರವ ಸಲ್ಲಿಸಿದಂತಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಾಗಿ, ಸ್ಥಳದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕೆಲವು ಷರತ್ತುಗಳನ್ನು ವಿಧಿಸಲಾಗಿತ್ತು. ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ಪಡೆದಿರಲಿಲ್ಲ ಅಥವಾ ಈ ಕುರಿತು ಪೊಲೀಸರಿಗೆ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿರಲಿಲ್ಲ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಆದರೆ, ಸ್ಥಳೀಯರಲ್ಲದ ಹೊರಗಿನ ವ್ಯಕ್ತಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದಾಗ ಹಾಗೂ ಈ ಕುರಿತು ಕಾಲೇಜು ಆಡಳಿತ ಮಂಡಳಿಯಿಂದ ದೂರು ಬಂದಾಗ ಪೊಲೀಸರು ನಿರ್ಲಕ್ಷ್ಯ ವಹಿಸಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಅವರು ವಿವರಿಸಿದ್ದಾರೆ.
ಮುಂದೆ ಇಂತಹ ಚಟುವಟಿಕೆಗಳಲ್ಲಿ ತೊಡಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ, ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಅಂತಿಮವಾಗಿ ಯಾರಿಂದಲೂ ಬಾಂಡ್ ಪಡೆಯಲಿಲ್ಲ ಎಂದು ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
