ಪುತ್ತೂರು: ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

Spread the love

ಪುತ್ತೂರು: ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ಪುತ್ತೂರು: ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದಿದ್ದ ವೇಳೆ ಕಲಾಪ ನಡೆಯುತ್ತಿದ್ದಾಗ ಏಕಾಏಕಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರು ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು 2 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ.

ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್ ಜಯೇಶ್ ಕಾಂತ್ ಎಸ್. ಶಾಹಿರ್ ಅಲಿಯಾಸ್ ಶಾಕಿರ್ (41) ಶಿಕ್ಷೆಗೊಳಗಾದ ಆರೋಪಿ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 120/2008ರಲ್ಲಿ ಕಲಂ 450, 302, 201 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತನನ್ನು 2016ರ ಏಪ್ರಿಲ್ 5ರಂದು ಮಂಗಳೂರು ಕಾರಾಗೃಹದಿಂದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಕರೆತರಲಾಗಿತ್ತು. ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಆರೋಪಿ ಏಕಾಏಕಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ.

ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2016, ಕಲಂ 224 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಖಾದರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಕಾನೂನು ಅಭಿಯೋಜಕ ಮನೋಜ್ ಕುಮಾರ್ ಅವರು ಪ್ರಕರಣದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಅಕ್ಟೋಬರ್ 5, 2026ರಂದು ಆರೋಪಿಗೆ 2 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.


Spread the love
Subscribe
Notify of

0 Comments