ಪುತ್ತೂರು ದರ್ಬೆ ಗಲಾಟೆ ಪ್ರಕರಣ: ಮೂವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲು, ಓರ್ವನ ಬಂಧನ

Spread the love

ಪುತ್ತೂರು ದರ್ಬೆ ಗಲಾಟೆ ಪ್ರಕರಣ: ಮೂವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲು, ಓರ್ವನ ಬಂಧನ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆಯಲ್ಲಿ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಬಂಧಿತ ಆರೋಪಿಗೆ ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ-1: ಸುದರ್ಶನ್ ಪೈ ಬಂಧನ

ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 97/2026 ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, ಆಗಸ್ಟ್ 21ರಂದು ಫಾತಿಮತ್ ಮಿಸ್ವಾನ ಅವರು ತಮ್ಮ ಸಹೋದರ ಹಾಗೂ ತಂಗಿಯೊಂದಿಗೆ ಪುತ್ತೂರಿಗೆ ಬಂದು ದರ್ಬೆಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ಕೆಲವು ದಾಖಲೆಗಳನ್ನು ಪ್ರಿಂಟ್ ಹಾಗೂ ಲ್ಯಾಮಿನೇಷನ್ ಮಾಡಲು ನೀಡಿದ್ದರು. ಬಳಿಕ ದಾಖಲೆಗಳನ್ನು ವಾಪಸ್ ಪಡೆಯುವ ಸಂದರ್ಭದಲ್ಲಿ ಅವುಗಳ ಪೈಕಿ ಒಂದು ದಾಖಲೆ ಹಾನಿಗೊಂಡಿರುವುದು ಕಂಡುಬಂದಿದೆ.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ದಾಖಲೆಯನ್ನು ಸರಿಪಡಿಸಿಕೊಡುವಂತೆ ಅಥವಾ ಹೊಸ ದಾಖಲೆ ಪಡೆಯಲು ₹300 ನೀಡುವಂತೆ ಕೇಳಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ್ ಪೈ ಅವಾಚ್ಯವಾಗಿ ಬೈದಿದ್ದು, ಸುದರ್ಶನ್ ಪೈ ಅವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಬಳಿಕ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೂರಿನ ಆಧಾರದ ಮೇಲೆ BNS 2023ರ ಕಲಂ 352, 115(2), 109 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಸುದರ್ಶನ್ ಪೈ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ-2: ಅಂಜನಾ ಪೈ ದೂರು

ಪುತ್ತೂರು ಕಸಬಾ ನಿವಾಸಿ ಅಂಜನಾ ಎಸ್. ಪೈ (50) ಅವರು ನೀಡಿದ ದೂರಿನ ಮೇರೆಗೆ ಅ.ಕ್ರ. 98/2026 ಪ್ರಕರಣ ದಾಖಲಾಗಿದೆ.

ಅಂಜನಾ ಪೈ ಅವರು ದರ್ಬೆಯಲ್ಲಿ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರ ನಡೆಸುತ್ತಿದ್ದಾರೆ. ಆಗಸ್ಟ್ 21ರಂದು ಮಹಿಳೆಯೊಬ್ಬರು ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲೆಯೊಂದು ತಾಂತ್ರಿಕ ದೋಷದಿಂದ ಹಾನಿಗೊಂಡಿದ್ದು, ಈ ಕುರಿತು ಮಹಿಳೆ ಗಲಾಟೆ ಮಾಡುತ್ತಿರುವುದಾಗಿ ಸಿಬ್ಬಂದಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅಂಜನಾ ಪೈ ಅವರು ಅಂಗಡಿಗೆ ತೆರಳಿದ್ದರು.

ಈ ವೇಳೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಗಲಾಟೆ ನಡೆಸಿ, ದಾಖಲೆಗಳನ್ನು ನೀಡಬೇಕು ಅಥವಾ ₹10,000 ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದಾಗ ಆರೋಪಿಗಳು ವಿಡಿಯೋ ಮಾಡಲು ಯತ್ನಿಸಿ, ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ ಹಾಗೂ ಮತ್ತೋರ್ವ ಆರೋಪಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಫಾತಿಮತ್ ಮಿಸ್ವಾನ, ಮುಬಾಶಿರಾ, ಮುಬಾರಿಶ್ ಹಾಗೂ ನೌಶಾದ್ ವಿರುದ್ಧ BNS 2023ರ ಕಲಂ 115(2), 352, 351(2), 79 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಪ್ರಕರಣ-3: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ

ಆಗಸ್ಟ್ 21ರಂದು ಸಂಜೆ ದರ್ಬೆ ಜಂಕ್ಷನ್ ಬಳಿಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದ ಎದುರು ಸಾರ್ವಜನಿಕರು ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ಅವರಿಗೆ ಮಾಹಿತಿ ಬಂದಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ ಜನರು ಗುಂಪುಗೂಡಿರುವುದು ಕಂಡುಬಂದಿದೆ. ಪೊಲೀಸರು ಗುಂಪನ್ನು ಚದುರಿಸುತ್ತಿದ್ದ ವೇಳೆ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತಿಳಿಸಲಾಗಿದೆ.

ಗಲಾಟೆಗೆ ಸಂಬಂಧಿಸಿದ ಕೆಲವರನ್ನು ಠಾಣೆಗೆ ಕರೆದೊಯ್ಯುತ್ತಿದ್ದಾಗ ನಿಯಾಝ್, ನೌಶಾದ್ ಹಾಗೂ ಇತರರು ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪದ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 99/2026 ಪ್ರಕರಣ ದಾಖಲಾಗಿದೆ.

ಈ ಪ್ರಕರಣದಲ್ಲಿ BNS 2023ರ ಕಲಂ 132, 121(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


Spread the love
Subscribe
Notify of

0 Comments