ಪುತ್ತೂರು | ಅಂತರ್‌ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Spread the love

ಪುತ್ತೂರು | ಅಂತರ್‌ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್‌ರಾಜ್ಯ ಕಳ್ಳತನದಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 19ರಿಂದ 20, 2026ರ ಅವಧಿಯಲ್ಲಿ ಓಮ್ನಿ ಕಾರು ಕಳ್ಳತನವಾಗಿದ್ದು, ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 94/2026, ಕಲಂ 303(2) BNS ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐಗಳಾದ ಗುಣಪಾಲ ಜೆ. ಮತ್ತು ಸುಷ್ಮಾ ಜಿ. ಭಂಡಾರಿ ನೇತೃತ್ವದ ತನಿಖಾ ತಂಡ ಕೈಗೊಂಡಿತ್ತು.

ತನಿಖಾ ತಂಡವು ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ, ಕೇರಳದ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ. (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ. (24) ಅವರನ್ನು ಬಂಧಿಸಿದೆ.

ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ ಸುಮಾರು ₹2.5 ಲಕ್ಷ ಮೌಲ್ಯದ ಓಮ್ನಿ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಕೆಟಿಎಂ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ವಿಚಾರಣೆಯಲ್ಲಿ, ಆರೋಪಿಗಳು ಓಮ್ನಿ ಕಾರನ್ನು ಕಳ್ಳತನ ಮಾಡಿ ಕೇರಳಕ್ಕೆ ಕೊಂಡೊಯ್ದು, ಬಳಿಕ ಕೇರಳದಿಂದ ತಮಿಳುನಾಡಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ತಮಿಳುನಾಡಿನಲ್ಲಿ ಕಳ್ಳತನದ ವಾಹನವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಕೇರಳದ ಬದಿಯಡ್ಕ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಗಳಲ್ಲೂ ಕಳ್ಳತನ ಪ್ರಕರಣಗಳು ಈಗಾಗಲೇ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Subscribe
Notify of

0 Comments