ರಾಕೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದ ದ್ವೇಷದ ಹಿನ್ನೆಲೆಯಲ್ಲಿ ತಲವಾರಿನಿಂದ ರಾಕೇಶ್ ಎಂಬವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿರುವ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಆರೋಪಿಗಳಾದ ಸುನಿಲ್ ಕುಮಾರ್ ಅಲಿಯಾಸ್ ಕೌಟಿ, ಪ್ರವೀಣ್ ಪೂಜಾರಿ ಅಲಿಯಾಸ್ ಚೋಟು, ಪ್ರೀತಮ್ ಅಲಿಯಾಸ್ ಅಭಿ ಹಾಗೂ ರೋಹಿತ್ ಕುಮಾರ್ ಅಲಿಯಾಸ್ ಶೂಟರ್ ಶಿಕ್ಷೆಗೊಳಗಾದವರು.
2019ರ ಜನವರಿ 3ರಂದು ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜಿನ ಬಳಿ, ಮೊದಲ ಆರೋಪಿ ಸುನಿಲ್ ಕುಮಾರ್‌ನ ತಂಗಿಯನ್ನು ರಾಕೇಶ್ ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ನಾಲ್ವರು ಆರೋಪಿಗಳು ಸೇರಿ ತಲವಾರಿನಿಂದ ಹಲ್ಲೆ ನಡೆಸಿ ರಾಕೇಶ್‌ನನ್ನು ಕೊಲೆ ಮಾಡಿದ್ದರು. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 02/2019ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 302, 120(ಬಿ), 201, 212 ಹಾಗೂ 34ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಬಳಿಕ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ ಮಾರುತಿ ಕಮಟೆ ಅವರು, ಎಸ್‌ಸಿ 105/2019ರ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಿದ್ದಾರೆ.
ಮೊದಲನೇಯಿಂದ ಮೂರನೇ ಆರೋಪಿಗಳಾದ ಸುನಿಲ್ ಕುಮಾರ್, ಪ್ರವೀಣ್ ಪೂಜಾರಿ ಹಾಗೂ ಪ್ರೀತಮ್ ಅವರಿಗೆ ಕೊಲೆ ಮತ್ತು ಅಪರಾಧದ ಸಂಚು ರೂಪಿಸಿದ ಆರೋಪದಡಿ ಭಾರತೀಯ ದಂಡ ಸಂಹಿತೆಯ ಕಲಂ 302, 120(ಬಿ) ಜೊತೆಗೆ 34ರ ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ತಲಾ ₹15,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದಲ್ಲಿ ಒಂದು ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗಿದೆ.
ನಾಲ್ವರು ಆರೋಪಿಗಳಿಗೂ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಕಲಂ 201 ಜೊತೆಗೆ 34ರ ಪ್ರಕಾರ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಒಂದು ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗಿದೆ. ನಾಲ್ಕನೇ ಆರೋಪಿ ರೋಹಿತ್ ಕುಮಾರ್‌ಗೆ ಅಪರಾಧಿಗೆ ಆಶ್ರಯ ನೀಡಿದ ಆರೋಪದಡಿ ಕಲಂ 212 ಜೊತೆಗೆ 34ರ ಪ್ರಕಾರ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ ಒಂದು ತಿಂಗಳ ಹೆಚ್ಚುವರಿ ಶಿಕ್ಷೆ ವಿಧಿಸಲಾಗಿದೆ.
ಒಟ್ಟು ₹70,000 ದಂಡದ ಮೊತ್ತದಲ್ಲಿ ₹20,000ವನ್ನು ಸರ್ಕಾರಕ್ಕೆ ಹಾಗೂ ₹50,000ವನ್ನು ಮೃತ ರಾಕೇಶ್‌ನ ತಂದೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಮೋತೀಲಾಲ್ ಚೌದರಿ ಅವರು ವಾದ ಮಂಡಿಸಿದ್ದರು. ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ಅವರು ಪ್ರಕರಣದ ತನಿಖೆ ನಡೆಸಿದ್ದರು.













