Home Mangalorean News Kannada News ರಾಮ ಮಂದಿರ ಹುಂಡಿ ಹಗರಣ ದೇಶಕ್ಕೆ ನೋವುಂಟು ಮಾಡಿದೆ: ಕೋಟ ಶ್ರೀನಿವಾಸ ಪೂಜಾರಿ

ರಾಮ ಮಂದಿರ ಹುಂಡಿ ಹಗರಣ ದೇಶಕ್ಕೆ ನೋವುಂಟು ಮಾಡಿದೆ: ಕೋಟ ಶ್ರೀನಿವಾಸ ಪೂಜಾರಿ

Spread the love

ರಾಮ ಮಂದಿರ ಹುಂಡಿ ಹಗರಣ ದೇಶಕ್ಕೆ ನೋವುಂಟು ಮಾಡಿದೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಯೋಧ್ಯೆಯ ರಾಮ ಮಂದಿರ ಹುಂಡಿ ಹಗರಣದ ವಿಚಾರ ದೇಶದ ಜನತೆ, ಬಿಜೆಪಿ ಹಾಗೂ ಸಂಘ ಪರಿವಾರಕ್ಕೆ ನೋವುಂಟು ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರವು ಹಿಂದೂಗಳ ಶ್ರೇಷ್ಠ ಆರಾಧನಾ ಕೇಂದ್ರವಾಗಿದ್ದು, ದೇಶದ ಭಕ್ತರ ಆರ್ಥಿಕ ಹಾಗೂ ಭಾವನಾತ್ಮಕ ನಂಬಿಕೆಯ ಪ್ರತೀಕವಾಗಿದೆ. ಇಂತಹ ಪವಿತ್ರ ಸ್ಥಳದಲ್ಲಿ ನಡೆದಿರುವ ಘಟನೆ ದುಃಖಕರವಾಗಿದ್ದು, ಪ್ರಕರಣದಲ್ಲಿ ತಕ್ಷಣವೇ ಬಂಧನ ಪ್ರಕ್ರಿಯೆ ನಡೆಸಲಾಗಿದೆ. ಯಾರೇ ತಪ್ಪು ಮಾಡಿದ್ದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ಹೇಳಿದರು.

ಆರ್ಎಸ್ಎಸ್ ನೋಂದಣಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು-ನೀವು ಹುಟ್ಟುವ ಮೊದಲೇ ಸುಮಾರು ಶತಮಾನದಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅಸ್ತಿತ್ವದಲ್ಲಿದೆ. ರಾಷ್ಟ್ರಭಕ್ತಿ ಹಾಗೂ ಜನಸೇವೆಯ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯಾಗಿದ್ದು, ಜಾತಿ-ಧರ್ಮಕ್ಕಿಂತ ದೇಶವೇ ಮೊದಲು ಎನ್ನುವ ಸಿದ್ಧಾಂತವನ್ನು ಹೊಂದಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಂದಲೂ ಆರ್ಎಸ್ಎಸ್ ಮೆಚ್ಚುಗೆ ಪಡೆದಿದ್ದು, ಗಣರಾಜ್ಯೋತ್ಸವ ಪಥಸಂಚಲನದಲ್ಲೂ ಸಮವಸ್ತ್ರದೊಂದಿಗೆ ಭಾಗವಹಿಸಿರುವ ಇತಿಹಾಸವಿದೆ. ಆರ್ಎಸ್ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಆರ್ಎಸ್ಎಸ್ ನೋಂದಣಿ ಕುರಿತು ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನೋಂದಣಿ ಮಾಡಿಕೊಳ್ಳಬೇಕಾದವರು ಮಾಡಿಕೊಂಡುಕೊಳ್ಳುತ್ತಾರೆ. ಈ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ” ಎಂದು ಟೀಕಿಸಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕಿದ್ದು, ಇದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಕ್ರಮವಾಗಿದೆ. ಪ್ರತಿಯೊಬ್ಬ ಭಾರತೀಯರೂ ಮತದಾನದ ಹಕ್ಕಿನಲ್ಲಿ ಭಾಗವಹಿಸುವಂತಾಗಬೇಕು ಎಂಬ ಉದ್ದೇಶದಿಂದ ಎಸ್ಐಆರ್ ಪ್ರಕ್ರಿಯೆ ಆರಂಭಿಸಲಾಗಿದೆ. ಮನೆಗಳಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಹಾಗೂ ಬಿಎಲ್ಒ-2 ಸಿಬ್ಬಂದಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಎಸ್ಐಆರ್ ಪ್ರಕ್ರಿಯೆಯನ್ನು ಟೀಕಿಸುವವರು ಮೊದಲು ಅದರ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು. ಬಾಂಗ್ಲಾದೇಶ ಸೇರಿದಂತೆ ವಿದೇಶಗಳಿಂದ ಬಂದವರು ಭಾರತದ ಮತದಾರರ ಪಟ್ಟಿಯಲ್ಲಿ ಸೇರಿ ಮತದಾನ ಮಾಡುವಂತಹ ದುಷ್ಪರಂಪರೆಗೆ ಈ ಪ್ರಕ್ರಿಯೆ ಅಂತ್ಯ ಹಾಡಲಿದೆ. ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರು, ಭಯೋತ್ಪಾದಕರು ಹಾಗೂ ದೇಶದ ಹಿತಾಸಕ್ತಿಗೆ ಧಕ್ಕೆ ತರುವವರನ್ನು ಮತದಾರರ ಪಟ್ಟಿಯಿಂದ ದೂರವಿಡಲು ಎಸ್ಐಆರ್ ಸಹಕಾರಿಯಾಗಲಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವಕ್ಕೆ ಎಸ್ಐಆರ್ ಕಂಟಕ ಎನ್ನುವುದು ಸರಿಯಲ್ಲ. ಬದಲಾಗಿ ಇದು ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಮೂಲಕ ಪ್ರಜಾಪ್ರಭುತ್ವವನ್ನು ಇನ್ನಷ್ಟು ಗಟ್ಟಿಗೊಳಿಸುವ ವ್ಯವಸ್ಥೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಕಂದಾಯ ಇಲಾಖೆಯ ಮೂಲಕ ಅಧಿಕೃತ ವಾಸ್ತವ್ಯ ದೃಢೀಕರಣ ಪತ್ರ ನೀಡುವುದಾಗಿ ಹೇಳಿರುವ ವಿಚಾರ ಪ್ರಸ್ತಾಪಿಸಿದ ಅವರು, ಇಂತಹ ಪ್ರಮಾಣಪತ್ರಗಳನ್ನು ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ವಿದೇಶಿ ಮತದಾರರು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನಕಲಿ ಮತದಾರರನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿರುವ ಅನುಮಾನವಿದ್ದು, ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ನಕಲಿ ಮತದಾರರ ನೋಂದಣಿ ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ. ಆದ್ದರಿಂದ ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ನಿಯಮಾನುಸಾರ ಕೆಲಸ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ಮತದಾರರ ಪರಿಶೀಲನೆಗಾಗಿ ಚುನಾವಣಾ ಆಯೋಗವು ಹತ್ತಕ್ಕೂ ಹೆಚ್ಚು ದಾಖಲೆಗಳನ್ನು ಸಲ್ಲಿಸಲು ಅವಕಾಶ ನೀಡಿರುವುದರಿಂದ ಸಾರ್ವಜನಿಕರು ಸೂಕ್ತ ದಾಖಲೆಗಳನ್ನು ಒದಗಿಸಿ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಬೆಂಬಲಿಗರ ನಡುವಿನ ಕಚ್ಚಾಟ ಪ್ರಕರಣದಲ್ಲಿ ಚಪ್ಪಲಿ ಎಸೆದ ಘಟನೆ ಖಂಡನೀಯ. ಆದರೆ ಆಡಳಿತ ಪಕ್ಷದ ಶಾಸಕರು ಪ್ರಚೋದನಾತ್ಮಕವಾಗಿ ವರ್ತಿಸುವುದೂ ಸಮರ್ಥನೀಯವಲ್ಲ ಎಂದರು.

ಚಪ್ಪಲಿ ಎಸೆಯುವುದು ತಪ್ಪು. ಅದನ್ನು ಯಾವುದೇ ಕಾರಣಕ್ಕೂ ಸಮರ್ಥಿಸುವುದಿಲ್ಲ. ಆದರೆ ಕಾರಿನ ಮೇಲೆ ನಿಂತು ತೊಡೆ ತಟ್ಟಿ, ಭುಜ ತಟ್ಟಿ ಎದುರಾಳಿಗಳನ್ನು ಪ್ರಚೋದಿಸುವ ರೀತಿಯ ವರ್ತನೆ ಆಡಳಿತ ಪಕ್ಷದ ಶಾಸಕರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಬೇಕು. ರಾಜ್ಯದಲ್ಲಿ ಗುಂಡಾಗಿರಿ ನಿಯಂತ್ರಿಸುವ ಬಗ್ಗೆ ಸರ್ಕಾರದ ನಿಲುವೇನು ಎಂಬುದನ್ನು ತಿಳಿಸಬೇಕು. ಮೊದಲು ತಮ್ಮ ಪಕ್ಷದ ಶಾಸಕರಿಗೆ ಸೂಕ್ತ ಬುದ್ಧಿವಾದ ಹೇಳುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು, ಪ್ರಚೋದನಾತ್ಮಕವಾಗಿ ವರ್ತಿಸಿದವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದಿರುವುದು ಸರಿಯಲ್ಲ ಎಂದು ಅವರು ಆರೋಪಿಸಿದರು.

ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜ್ಯಧರ್ಮ ಪಾಲಿಸಿ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ದೂರು ಬಂದರೆ ಮಾತ್ರ ಪ್ರಕರಣ ದಾಖಲಿಸುತ್ತೇವೆ ಎನ್ನುವುದು ಸಮಂಜಸವಾದ ಉತ್ತರ ಅಲ್ಲ. ಈ ಹಿಂದೆ ಪರಮೇಶ್ವರ್ ಅವರ ಆಡಳಿತಾವಧಿಯಲ್ಲಿ ಇಂತಹ ಬೆಳವಣಿಗೆಗಳು ನಡೆಯುತ್ತಿರಲಿಲ್ಲ ಎಂದು ಅವರು ಹೇಳಿದರು.

ಆರ್ಎಸ್ಎಸ್ ವತಿಯಿಂದ ರಾಜ್ಯದ ಸುಮಾರು 500ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾರ್ಯಕ್ರಮಗಳು ನಡೆದಿದ್ದು, ಎಲ್ಲಿಯೂ ಯಾವುದೇ ಗೊಂದಲ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡಿಲ್ಲ. ಇದನ್ನು ಸರ್ಕಾರ ಗಮನಿಸಬೇಕು ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಆಡಿಯೋ ವಿವಾದದ ಕುರಿತು ಪ್ರತಿಕ್ರಿಯಿಸಲು ಇಚ್ಛಿಸುವುದಿಲ್ಲ. ಈ ವಿಚಾರವನ್ನು ತಾವು ಮಾಧ್ಯಮಗಳ ಮೂಲಕವೇ ಗಮನಿಸಿದ್ದು, ಸದಾನಂದ ಗೌಡರು ತಾವು ಆ ಆಡಿಯೋದಲ್ಲಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಅಡ್ಡ ಮತದಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ವಿಷಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉಂಟಾಗಿದ್ದು, ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಬಿಜೆಪಿ ಕೇಂದ್ರ ನಾಯಕತ್ವ ಈಗಾಗಲೇ ಪಡೆದುಕೊಂಡಿದೆ. ಸೂಕ್ತ ಮಟ್ಟದಲ್ಲಿ ಈ ವಿಚಾರವನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕರ ಪ್ರಮಾಣ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸಂಬಂಧಿಸಿದ ಶಾಸಕರು ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. “ನನ್ನಿಂದ ಯಾವುದೇ ತಪ್ಪಾಗಿಲ್ಲ” ಎಂಬ ತಮ್ಮ ನಿಲುವನ್ನು ಅವರು ತಿಳಿಸಿದ್ದಾರೆ. ಪ್ರತಿಯೊಬ್ಬರಿಗೂ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಹಕ್ಕಿದ್ದು, ಅದನ್ನು ಗೌರವಿಸಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version