ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ, ₹54 ಸಾವಿರ ದಂಡ
ಬಂಟ್ವಾಳ: ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ, ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿ ಅನಿಲ್ ಎಂಬಾತ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 92/2021ರಡಿ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಮೋತಿಲಾಲ್ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.













