ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹50 ಸಾವಿರ ದಂಡ

Spread the love

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹50 ಸಾವಿರ ದಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರ ಮೇ 8ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 40/2021ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾದ ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ವಿರುದ್ಧ ತನಿಖೆ ನಡೆಸಿದ ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೊ)–2012ರ ಕಲಂ 5(l) ಸಹವಾಚನ 6ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ.

ಅದೇ ರೀತಿ, ಭಾರತೀಯ ದಂಡ ಸಂಹಿತೆಯ ಕಲಂ 506ರಡಿ ಜೀವ ಬೆದರಿಕೆ ಹಾಕಿದ ಅಪರಾಧಕ್ಕೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದಲ್ಲಿ ಒಟ್ಟು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ಅವರು ಪ್ರಕರಣದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.


Spread the love
Subscribe
Notify of

0 Comments