ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ರವಿ ಅಲಿಯಾಸ್ ರವೀಂದ್ರ ಆಚಾರ್ಯಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Spread the love

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ರವಿ ಅಲಿಯಾಸ್ ರವೀಂದ್ರ ಆಚಾರ್ಯಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಬೆದರಿಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ನೆಲ್ಯಾಡಿ ನಿವಾಸಿ ರವಿ ಅಲಿಯಾಸ್ ರವೀಂದ್ರ ಆಚಾರ್ಯ (32) ಎಂಬಾತನಿಗೆ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 50 ಸಾವಿರ ರೂ. ದಂಡ ವಿಧಿಸಿದೆ.

ಕಡಬ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ ಈ ಪ್ರಕರಣದ ತನಿಖೆಯನ್ನು ಅಂದಿನ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಡಿ. ಮಂಜುನಾಥ್ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲ ಅವರು, ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯ ಸೆಕ್ಷನ್ 5ರೊಂದಿಗೆ ಓದಲಾದ ಸೆಕ್ಷನ್ 6ರ ಅಡಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.

ಅಲ್ಲದೆ, ಐಪಿಸಿ ಸೆಕ್ಷನ್ 506ರ ಅಡಿ ಬೆದರಿಕೆ ಅಪರಾಧಕ್ಕಾಗಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದಲ್ಲಿ ಸರಕಾರಿ ಅಭಿಯೋಜಕ ಪುಷ್ಪರಾಜ್ ಅಡಂತ್ಯಾಯ ಅವರು ವಾದ ಮಂಡಿಸಿದ್ದರು.


Spread the love
Subscribe
Notify of

0 Comments