ರಸ್ತೆ ಅತಿಕ್ರಮಣ ದೂರು: ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ
ಮಂಗಳೂರು: ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆಯಲ್ಲಿ ರಸ್ತೆ ಅತಿಕ್ರಮಣವಾಗಿರುವ ಬಗ್ಗೆ ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದರು.
ಮೇಲ್ನೋಟಕ್ಕೆ ರಸ್ತೆ ಅತಿಕ್ರಮಣವಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಏಕ ನಿವೇಶನ ವಿನ್ಯಾಸವನ್ನು ರದ್ದುಗೊಳಿಸಿ ಪರಿಷ್ಕೃತ ವಿನ್ಯಾಸಕ್ಕೆ ಅನುಮೋದನೆ ಪಡೆಯುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
