ಬಂಟ್ವಾಳದಲ್ಲಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ, ₹2.01 ಲಕ್ಷ ನಗದು ವಶ
ಬಂಟ್ವಾಳ: ಮಂಗಳೂರಿನ ಕಣ್ಣೂರಿನ ಸಿಮೆಂಟ್ ಮತ್ತು ಕಬ್ಬಿಣ ಮಾರಾಟ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಮಯ್ಯದಿ (40) ಅವರಿಂದ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
2026ರ ಆಗಸ್ಟ್ 20ರಂದು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸುವ ಸಲುವಾಗಿ ಬೈಕ್ನಲ್ಲಿ ತೆರಳಿದ್ದ ಮಯ್ಯದಿ ಅವರು ವಿವಿಧ ಅಂಗಡಿಗಳಿಂದ ನಗದು ಸಂಗ್ರಹಿಸಿಕೊಂಡು ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಬಂಟ್ವಾಳದ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ಎರಡು ಬೈಕ್ಗಳಲ್ಲಿ ಬಂದ ನಾಲ್ವರು ಅಪರಿಚಿತರು ತಲವಾರು ತೋರಿಸಿ ಬೆದರಿಸಿ ಅವರ ಬಳಿಯಿದ್ದ ₹8,35,000 ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು.
ಈ ಕುರಿತು ದಾಖಲಾದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 115/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 309(6) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಕಲಂ 25(1)(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಅವರ ನೇತೃತ್ವದ ತಂಡ ನವೆಂಬರ್ 11ರಂದು ಮೂವರು ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ವಿಚಾರಣೆಗಾಗಿ ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳಿಂದ ₹2,01,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿಗಳ ಪೈಕಿ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ಕೂಡ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
