ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಬಾಹ್ಯಾಕಾಶ ಸಪ್ತಾಹ: ಪ್ರಶ್ನಿಸುವ ಗುಣ ವಿದ್ಯಾರ್ಥಿಗಳಲ್ಲಿ ಅಗತ್ಯ: ಡಾ. ಸಿ.ಎಸ್ ಮಧುಸೂದನ್
ಮಂಗಳೂರು: ವಿಶ್ವ ಬಾಹ್ಯಾಕಾಶ ಸಪ್ತಾಹದ ಅಂಗವಾಗಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರ ಹಾಗೂ ಇಸ್ರೋ ಸಹಯೋಗದೊಂದಿಗೆ ವಿಶ್ವ ಬಾಹ್ಯಾಕಾಶ ಸಪ್ತಾಹ ಉದ್ಘಾಟನಾ ಸಮಾರಂಭ ಬುಧವಾರ ನಡೆಯಿತು.
ಯು.ಆರ್. ರಾವ್ ಉಪಗ್ರಹ ಕೇಂದ್ರದ ಉಪನಿರ್ದೇಶಕ ಡಾ. ಸಿ.ಎಸ್ ಮಧುಸೂದನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ, ಪರಿಶೀಲಿಸುವ ಹಾಗೂ ಸಾಕ್ಷ್ಯಾಧಾರಿತವಾಗಿ ಚಿಂತಿಸುವ ಮನೋಭಾವವನ್ನು ಅಭಿವೃದ್ಧಿಪಡಿಸಬೇಕು. ತಂತ್ರಜ್ಞಾನ ಮಿತ ಬಳಕೆ ಮಾಡಿ ಪುಸ್ತಕದಲ್ಲಿರುವ ವಿದ್ಯೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರೂ ಬಾಹ್ಯಾಕಾಶದ ಬಗ್ಗೆ ಅಪಾರ ಜ್ಞಾನವನ್ನು ಪಡೆದು ದೇಶಕ್ಕೆ ಕೊಡುಗೆಯನ್ನು ನೀಡಲು ಸಾಕ್ಷಿಯಾಗಬೇಕು ಎಂದು ಹೇಳಿದರು.
ಎನ್.ಐ.ಟಿ.ಕೆ ಸುರತ್ಕಲ್ನ ನಿವೃತ್ತ ಪ್ರಾಧ್ಯಾಪಕ . ಜಿ.ಶ್ರೀನಿಕೇತನ್ ಮಾತನಾಡಿ, ರಾಕೆಟ್ ತಂತ್ರಜ್ಞಾನದಲ್ಲಿನ ನಿರಂತರ ಸಂಶೋಧನೆ ಮತ್ತು ನವೀನ ಆವಿಷ್ಕಾರಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳಿಗೆ ದಾರಿ ಮಾಡಿಕೊಟ್ಟಿವೆ. ಈ ‘ರಾಕೆಟ್ ಕ್ರಾಂತಿ’ಯ ಮೂಲಕ ಭಾರತವು ಬಾಹ್ಯಾಕಾಶ ಅನ್ವೇಷಣೆಯಲ್ಲಿ ಮಹತ್ವದ ಸಾಧನೆಗಳನ್ನು ಮಾಡುತ್ತಿದೆ. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದರ ಜೊತೆಗೆ, ವಿಜ್ಞಾನ ಮತ್ತು ಶಿಕ್ಷಣದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸಿ, ಭವಿಷ್ಯದಲ್ಲಿ ದೇಶಕ್ಕೆ ಹೆಮ್ಮೆ ತರುವಂತಹ ಸಾಧನೆಗಳನ್ನು ಮಾಡಬೇಕು. ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸುವ ಈ ಅಮೂಲ್ಯ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು, ತಮ್ಮ ಜ್ಞಾನವನ್ನು ವಿಸ್ತರಿಸಿ, ದೇಶದ ಕೀರ್ತಿಯನ್ನು ಹೆಚ್ಚಿಸುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು ಎಂದು ಅವರು ತಿಳಿಸಿದರು.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಕಸಿತ ಭಾರತದ ನಿರ್ಮಾಣಕ್ಕಾಗಿ ನವೀನ ಆಲೋಚನೆಗಳು, ತಂತ್ರಜ್ಞಾನ ಮತ್ತು ಪರಸ್ಪರ ಸಹಯೋಗಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಜನರ ಜೀವನವನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಹೊಸ ಆಲೋಚನೆಗಳನ್ನು ಬೆಳೆಸಿಕೊಂಡು, ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡಬೇಕು. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತವನ್ನು ವಿಶ್ವದ ಅಗ್ರಸ್ಥಾನಕ್ಕೆ ಕೊಂಡೊಯ್ಯಲು ಎಲ್ಲರೂ ಕಂಕಣಬದ್ಧರಾಗಬೇಕು ಎಂದರು.
ನಂತರ ಸ್ವಾಮಿ ವಿವೇಕಾನಂದ ತಾರಾಲಯದ ಪಕ್ಕದ ಗ್ಯಾಲರಿಯಲ್ಲಿ ಇಸ್ರೋ ವತಿಯಿಂದ ಬಾಹ್ಯಾಕಾಶಕ್ಕೆ ಸಂಬಂಧಿಸಿದ ಮಾದರಿಗಳನ್ನು ವಿದ್ಯಾರ್ಥಿಗಳು ವೀಕ್ಷಿಸಿದರು. ವಿಶೇಷವಾಗಿ ತಾರಾಲಯದಲ್ಲಿ ವಿದ್ಯಾರ್ಥಿಗಳಿಗೆ ದಿ ಮೂನ್ ಎಂಬ 2ಡಿ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಮಧ್ಯಾಹ್ನ ನಂತರದ ಅವಧಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರತಿಷ್ಠಿತ ಇಸ್ರೋದ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಉಪಗ್ರಹ ಮಾದರಿಗಳ ತಯಾರಿಕೆಯ ಸ್ಪರ್ಧೆಯನ್ನು ಕೇಂದ್ರದಲ್ಲಿ ಆಯೋಜಿಸಲಾಗಿತ್ತು.
ಬಹುಮಾನ ವಿತರಣೆ ಸಮಾರಂಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ದ.ಕ.ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಡಿಪೆÇ್ಲಮ ಕಾಲೇಜಿನ ಸುಮಾರು 750 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ವೀರೇಂದ್ರ ಆರ್ ಕವಿ ಶೆಟ್ಟಿ ಉಪಸ್ಥಿತರಿದ್ದರು. ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಅಶೋಕ್ ಕೆ.ಆರ್ ಸ್ವಾಗತಿಸಿ, ವೈಜ್ಞಾನಿಕಾಧಿಕಾರಿ ವಿಘ್ನೇಶ್ ಭಟ್ ವಂದಿಸಿದರು. ಶೈಕ್ಷಣಿಕ ಸಹಾಯಕಿ ಚಂಚಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
