ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ
ಹುಬ್ಬಳ್ಳಿ: ವರ್ಗಾವಣೆಗೊಂಡ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಪೊಲೀಸ್ ಸಿಬ್ಬಂದಿ ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು.

ನಗರದ ನವನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪೊಲೀಸ್ ಆಯುಕ್ತರಾಗಿ ಭೂಷಣ್ ಬೊರಸೆ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಎನ್. ಶಶಿಕುಮಾರ್ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು.
ಸುಮಾರು ಎರಡು ವರ್ಷ ಎರಡು ತಿಂಗಳ ಕಾಲ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಎನ್. ಶಶಿಕುಮಾರ್ ಅವರನ್ನು ಸಿಬ್ಬಂದಿ ಗೌರವಪೂರ್ವಕವಾಗಿ ಬೀಳ್ಕೊಟ್ಟರು.
ಕಮಿಷನರ್ ಕಚೇರಿಯಿಂದ ಹೊರಡುವ ಸಂದರ್ಭದಲ್ಲಿ ಸಿಬ್ಬಂದಿ ಎನ್. ಶಶಿಕುಮಾರ್ ಅವರ ಮೇಲೆ ಪುಷ್ಪವೃಷ್ಟಿ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಸಿಬ್ಬಂದಿ ಅವರ ಪರವಾಗಿ ಜೈಕಾರ ಕೂಗಿ, ಆತ್ಮೀಯವಾಗಿ ಬೀಳ್ಕೊಟ್ಟರು.













