ಆಶಾ ಕಾರ್ಯಕರ್ತೆಯರ ಕನಿಷ್ಠ ವೇತನ ಬೇಡಿಕೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಲಿ : ಯಶ್ಪಾಲ್ ಸುವರ್ಣ ಆಗ್ರಹ

Spread the love

ಆಶಾ ಕಾರ್ಯಕರ್ತೆಯರ ಕನಿಷ್ಠ ವೇತನ ಬೇಡಿಕೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಲಿ : ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ರಾಜ್ಯದ ಗ್ರಾಮ ಗ್ರಾಮಗಳ ಮನೆ ಮನೆಗೆ ತೆರಳಿ ಜನರ ಆರೋಗ್ಯದ ಕಾಳಜಿಗಾಗಿ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರು ಕನಿಷ್ಟ ವೇತನವನ್ನು 15 ಸಾವಿರಕ್ಕೆ ಏರಿಕೆ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ರಾಜಧಾನಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ತಕ್ಷಣ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತಕ್ಷಣ ಈಡೇರಿಕೆಗೆ ಮುಂದಾಗಬೇಕು ಎಂದು ಉಡುಪಿ ಶಾಸಕ ಯಶ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷ 2023ರ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರ ನಿಗದಿತ ಮಾಸಿಕ ಗೌರವಧನವನ್ನು 5,000 ರೂ.ಗಳಿಂದ 8,000 ರೂ.ಗಳಿಗೆ ಹೆಚ್ಚಿಸುವ ಭರವಸೆಯನ್ನು ಇದೀಗ ರಾಜ್ಯ ಸರ್ಕಾರ ಮರೆತಿದ್ದು ಮೊದಲು ನುಡಿದಂತೆ ನಡೆಯಬೇಕು.

2025ರ ಜನವರಿಯಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರೇ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10,000 ರೂ. ನಿಗದಿತ ಗೌರವಧನ ನೀಡುವುದಾಗಿ, ಏಪ್ರಿಲ್ನಿಂದ ಜಾರಿಗೆ ಬರುವಂತೆ ಘೋಷಿಸಿದ್ದರೂ ಇನ್ನೂ ಜಾರಿಗೆ ಬಂದಿಲ್ಲ.

ಕೊರೆಯುವ ಚಳಿಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ತಮ್ಮ ಮಕ್ಕಳ ಜೊತೆ ಇಡೀ ರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಮರ್ಪಕ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ತಾಯಂದಿರಿಗೆ, ಸೋದರಿಯರಿಗೆ ಅನುಕೂಲಗಳಿಲ್ಲದ ಪರಿಸ್ಥಿತಿಯಲ್ಲಿ ಹೋರಾಟ ಮುಂದುವರಿಸುತ್ತಿದ್ದರೂ, ರಾಜ್ಯ ಸರ್ಕಾರ ಸ್ಪಂದಿಸದೇ ಇರುವುದು ಖಂಡನೀಯ.

ಗ್ಯಾರಂಟಿ ಭಾಗ್ಯ ಯೋಜನೆಗಳ ಅವೈಜ್ಞಾನಿಕ ಅನುಷ್ಠಾನದ ಮೂಲಕ ರಾಜ್ಯದ ಆರ್ಥಿಕ ಸ್ಥಿತಿಯನ್ನು ಪಾತಾಳಕ್ಕೆ ತಳ್ಳಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಆಶಾ ಕಾರ್ಯಕರ್ತೆಯರ ನ್ಯಾಯ ಸಮ್ಮತ ಬೇಡಿಕೆ ಈಡೇರಿಸಲು ಸಾಧ್ಯವಾಗದೇ ಅವರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ತಾಯಿ-ಮಗುವಿನ ಆರೋಗ್ಯ, ಲಸಿಕೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸೇರಿದಂತೆ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿಶೇಷ ಕೊಡುಗೆ ನೀಡುವ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ರಾಜ್ಯ ಸರ್ಕಾರ ಆದ್ಯತೆ ಮೇಲೆ ಪರಿಗಣಿಸಬೇಕು.

ಸರ್ಕಾರಿ ನೌಕರರಿಗೆ ನೀಡುವ ಸೇವಾ ಭದ್ರತೆ, ಆರೋಗ್ಯ ಸೇವೆ ಸೌಲಭ್ಯ, ಪಿಂಚಣಿ ಸಹಿತ ಎಲ್ಲಾ ಸೌಲಭ್ಯಗಳನ್ನು ಆಶಾ ಕಾರ್ಯಕರ್ತೆಯರಿಗೂ ಸರ್ಕಾರ ತಕ್ಷಣ ಒದಗಿಸಬೇಕು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ರಾಜ್ಯದ ಜನತೆಗೆ ಉಂಟಾಗುವ ಸಮಸ್ಯೆಗಳಿಗೆ ರಾಜ್ಯ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.


Spread the love
Subscribe
Notify of

0 Comments