ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ವಿದ್ಯಾರ್ಥಿ ಸಾವು; ಇಬ್ಬರಿಗೆ ಗಾಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೇಟಿ ಸಮೀಪ ಬುಧವಾರ ಸಂಜೆ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ. ಗಾಯಗೊಂಡ ಇಬ್ಬರನ್ನು ತಕ್ಷಣವೇ ಬಂಟ್ವಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕಕ್ಕೆ ಸೇರಿದ ಶಾಲಾ ಬಸ್ ಸಂಜೆ ಸುಮಾರು 5 ಗಂಟೆಯ ವೇಳೆಗೆ ವಿದ್ಯಾರ್ಥಿಗಳನ್ನು ಮನೆಗಳಿಗೆ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬರಿಮಾರು–ಕಲ್ಲೇಟಿ ರಸ್ತೆಯ ಕಲ್ಲೇಟಿ ದೇವಸ್ಥಾನದ ಸಮೀಪ ಸಾಗುತ್ತಿದ್ದಾಗ ಏಕಾಏಕಿ ಬೃಹತ್ ಮರವೊಂದು ಬಸ್ ಮೇಲೆ ಉರುಳಿಬಿದ್ದಿದೆ.
ಮರ ಬಿದ್ದ ರಭಸಕ್ಕೆ ಬಸ್‌ನಲ್ಲಿದ್ದ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ವಿದ್ಯಾರ್ಥಿಗಳನ್ನು ಈಗಾಗಲೇ ಅವರವರ ಮನೆಗಳ ಬಳಿ ಇಳಿಸಲಾಗಿದ್ದರಿಂದ ಬಸ್‌ನಲ್ಲಿ ಕೆಲವೇ ವಿದ್ಯಾರ್ಥಿಗಳು ಉಳಿದಿದ್ದರು. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ.













