ಭಾರತ್ ಮಾತಾ ಕೀ ಜೈ ಘೋಷಣೆ ಹಾಕಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ : ಯಶ್ಪಾಲ್ ಸುವರ್ಣ
ಉಡುಪಿ: ದಸರಾ ರಜೆಯಲ್ಲೂ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುವ ನಿರ್ಧಾರ ವಿರೋಧಿಸಿ ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಹಲ್ಲೆ ಮಾಡಿ ಅಮಾನುಷವಾಗಿ ನಡೆದುಕೊಂಡ ಪೊಲೀಸ್ ಅಧಿಕಾರಿಯ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ನಾಯಕರ ಅಣತಿಯಂತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರತಿಭಟನೆ ವೇಳೆ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬಂದಿದ್ದು ಈ ಬಗ್ಗೆಯೂ ತನಿಖೆ ನಡೆಸಬೇಕಿದೆ.
ದೆಹಲಿಯಲ್ಲಿ ಹಿಂಸಾಚಾರದಲ್ಲಿ ತೊಡಗಿ ಪ್ರತಿಭಟನೆ ನಡೆದಾಗ ವಿದ್ಯಾರ್ಥಿಗಳ ಮೇಲೆ ಯಾಕೆ ಲಾಠಿಚಾರ್ಜ್ ಮಾಡಲಾಯಿತು ಎಂದು ನೀವು ಅಮಿತ್ ಶಾ ಅವರನ್ನು ಕೇಳಿದಿರಾ? ಮಕ್ಕಳು ಏಕೆ ಆಸ್ಪತ್ರೆಯಲ್ಲಿದ್ದಾರೆ? ಯಾಕೆ..ಈ ವಿದ್ಯಾರ್ಥಿಗಳು ಭಯೋತ್ಪಾದಕರೇ?” ಎಂದು ಬೊಬ್ಬೆ ಹಾಕಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇದೀಗ ಕಾಂಗ್ರೆಸ್ ಪಕ್ಷದ ಆಡಳಿತವಿರುವ ಕರ್ನಾಟಕದಲ್ಲಿ ಪೋಲೀಸರು ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ರೀತಿಯಲ್ಲಿ ನಡೆಸಿದ ಹಲ್ಲೆಗೆ ಮೌನ ವಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಪಾಕಿಸ್ತಾನಕ್ಕೆ ಜೈ ಎಂದವರಿಗೆ ಯಾವುದೇ ಶಿಕ್ಷೆ ಇಲ್ಲ, ಆದರೆ ಭಾರತ ಮಾತೆಗೆ ಜಯವಾಗಲಿ ಎಂದ ವಿದ್ಯಾರ್ಥಿಗಳಿಗೆ ಪೊಲೀಸರು ಹಲ್ಲೆ ಮಾಡುತ್ತಾರೆ. ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ನಿಷೇಧಿಸಲಾಗಿದೆಯೇ ಎಂದು ಯಶ್ ಪಾಲ್ ಸುವರ್ಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
