ಮೀನು ಮಾರಾಟ ಫೆಡರೇಶನ್ ಮೂಲಕ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಅತ್ಯಂತ ಶ್ರೇಷ್ಠ : ಡಾ. ಎಂ.ಎನ್. ರಾಜೇಂದ್ರ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್. ಮಂಗಳೂರು ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 850 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಮಾಧವ ಮಂಗಲ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು.

ಸಮಾರಂಭದ ಉದ್ಘಾಟನೆ ನೆರವೇರಿಸಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರ ಕ್ಷೇತ್ರದಲ್ಲಿ ಮಾದರಿ ಸಂಸ್ಥೆಯಾಗಿ ಮೂಡಿಬಂದು, ಪ್ರತಿ ವರ್ಷ ಸಂಸ್ಥೆಗಳಿಸಿದ ಲಾಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಅತ್ಯಂತ ಶ್ರೇಷ್ಠ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಅಭಿನಂದನಾರ್ಹ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ ಪ್ರತಿಭಾ ಪುರಸ್ಕಾರಕ್ಕೆ ಪಾತ್ರರಾದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದರು.
ಮಂಗಳೂರು ದಕ್ಷಿಣ ಶಾಸಕ ಶ್ರೀ ವೇದವ್ಯಾಸ ಕಾಮತ್ ಮಾತನಾಡಿ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಸಾಧನೆಗಳನ್ನು ಮಾಡಿ ಯಶಸ್ವಿ ಜೀವನವನ್ನು ರೂಪಿಸಿಕೊಳ್ಳುವಂತೆ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಮಾನವೀಯ ಮೌಲ್ಯವನ್ನು ಬೆಳೆಸಿಕೊಂಡು ದೇಶದ ಉತ್ತಮ ಪ್ರಜೆಗಳಾಗುವ ಸಂಕಲ್ಪ ಮಾಡುವಂತೆ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ದ. ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಹಿಸಿದ್ದರು.
ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ.
ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಮೂಲಕ ಕರಾವಳಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಸ್ಪೂರ್ತಿ ತುಂಬಲಿ ಎಂದು ದ. ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರೂ, ಉಡುಪಿ ಶಾಸಕರೂ ಆದ ಯಶಪಾಲ್ ಸುವರ್ಣ ಹೇಳಿದರು
ಸಮಾರಂಭದಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಕೋಡಿಕಲ್, ದ. ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷರಾದ ಶ್ರೀ ಮೋಹನ್ ಬೆಂಗ್ರೆ, ಬಿಜೆಪಿ ಮಂಗಳೂರು ನಗರ ದಕ್ಷಿಣ ಉಪಾಧ್ಯಕ್ಷರಾದ ಶ್ರೀ ಗೌತಮ್ ಕೋಡಿಕಲ್, ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷರಾದ ಶ್ರೀ ಲೋಕೇಶ್ ಸುವರ್ಣ, ಮೀನು ಮಾರಾಟ ಫೆಡರೇಶನ್ ಉಪಾಧ್ಯಕ್ಷರಾದ ಶ್ರೀ ದೇವಪ್ಪ ಕಾಂಚನ್, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶರತ್ ಕುಮಾರ್ ಶೆಟ್ಟಿ ಎನ್., ಮೀನು ಮಾರಾಟ ಫೆಡರೇಶನ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ದರ್ಶನ್ ಉಪಸ್ಥಿತರಿದ್ದರು. ಶ್ರೀಮತಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.