ಕೊಲ್ಲೂರು ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ನಗದು ಕಳವು ಪ್ರಕರಣ: ಮೂವರು ಮಹಿಳೆಯರ ಬಂಧನ

Spread the love

ಕೊಲ್ಲೂರು ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳವು ಪ್ರಕರಣ: ಮೂವರು ಮಹಿಳೆಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ, ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಗಳಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 5ರಂದು ಭಕ್ತೆಯಾದ ನಿಮಿಷಾ ಹಾಗೂ ಅವರ ಪತಿ ಪ್ರಜೋಶ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದೇವರ ದರ್ಶನ ಮುಗಿಸಿ ಹೊರಬಂದ ವೇಳೆ, ಬೆಳಿಗ್ಗೆ ಸುಮಾರು 8.20 ಗಂಟೆಗೆ ನಿಮಿಷಾ ಅವರ ಕೈಯಲ್ಲಿದ್ದ ಕಂದು ಬಣ್ಣದ ವ್ಯಾನಿಟಿ ಬ್ಯಾಗ್ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬ್ಯಾಗ್ನಲ್ಲಿದ್ದ ಸುಮಾರು ₹80,000 ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ತಿಳಿದುಬಂದಿದೆ.

ದೇವಸ್ಥಾನದ ಸುತ್ತಮುತ್ತ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ, ಅಪರಿಚಿತರು ಪರ್ಸ್ ಹಾಗೂ ನಗದು ಕಳವು ಮಾಡಿರುವುದಾಗಿ ನೀಡಿದ ದೂರಿನ ಆಧಾರದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ, ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ, ತನಿಖಾಧಿಕಾರಿ ಪಿಎಸ್ಐ ಭೀಮಶಂಕರ್ ಹಾಗೂ ಸಿಬ್ಬಂದಿಯ ವಿಶೇಷ ತಂಡ ಪ್ರಕರಣದ ತನಿಖೆ ಕೈಗೊಂಡಿತು.

ತನಿಖೆ ವೇಳೆ ಸಿಸಿಟಿವಿ ದೃಶ್ಯಾವಳಿ, ಘಟನಾ ಸ್ಥಳದಲ್ಲಿ ಸಾರ್ವಜನಿಕರು ತೆಗೆದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ನೆರವಿನಿಂದ ಆರೋಪಿಗಳನ್ನು ಪತ್ತೆಹಚ್ಚಿದ ಪೊಲೀಸರು, ಪ್ರಕರಣ ದಾಖಲಾದ 24 ಗಂಟೆಯೊಳಗೆ ಮೂವರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಾಥಮಿಕ ತನಿಖೆಯಲ್ಲಿ ಬಂಧಿತ ಆರೋಪಿತರ ವಿರುದ್ಧ ಈ ಹಿಂದೆಯೂ ಹಲವು ಕಳವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ದುರ್ಗಮ್ಮ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕಳವು ಪ್ರಕರಣ ಸೇರಿ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ.

ಅದೇ ರೀತಿ ಶಾರದ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ ಸೇರಿದಂತೆ ಒಟ್ಟು ಮೂರು ಕಳವು ಪ್ರಕರಣಗಳು ದಾಖಲಾಗಿವೆ.

ಪ್ರಕರಣದ ಕುರಿತು ಕೊಲ್ಲೂರು ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.


Spread the love
Subscribe
Notify of

0 Comments